ಬೆಂಗಳೂರು: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ವಿಚಾರವಾಗಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಏನಿದು ಪ್ರಕರಣ?: ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಎದುರಿಸಿದ್ದ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ 2022ರ ಏಪ್ರಿಲ್ 14ರಂದು ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಅದರ ನೇತೃತ್ವವನ್ನು ಆಗ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ವಹಿಸಿದ್ದರು.
ಮೃತ ಸಂತೋಷ್ ಬರೆದಿಟ್ಟಿದ್ದ ಡೆತ್‌ನೋಟ್‌ನಲ್ಲಿ ಅಂದಿನ ಸಚಿವ ಕೆ.ಎಸ್. ಈಶ್ವರಪ್ಪ ಅವರ ಹೆಸರನ್ನು ಉಲ್ಲೇಖ ಮಾಡಲಾಗಿತ್ತು. ಹೀಗಾಗಿ ನೈತಿಕ ಹೊಣೆ ಹೊತ್ತು ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಪ್ರತಿಭಟನೆಯನ್ನು ಕಾಂಗ್ರೆಸ್ ನಾಯಕರು ಮಾಡಿದ್ದರು. ಈ ವೇಳೆ ಸಾರ್ವಜನಿಕ ಮುಕ್ತ ಸಂಚಾರಕ್ಕೆ ಅಡ್ಡಿ ಪಡಿಸಿದ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ನಗರದ ಹೈ ಗ್ರೌಂಡ್ಸ್ ಠಾಣಾ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.
ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲವು ನಾಯಕರಿಗೆ ದಂಡ ವಿಧಿಸಿತ್ತು. ಆದರೆ, ನಮ್ಮ ಪ್ರತಿಭಟನೆ ಕಾನೂನು ಬದ್ಧವಾಗಿತ್ತು ಎಂದಿರುವ ಸಿದ್ದರಾಮಯ್ಯ, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಸಿದ್ದರಾಮಯ್ಯ ಮಾತ್ರವಲ್ಲದೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಸಚಿವ ಎಂ.ಬಿ.ಪಾಟೀಲ್, ಸಚಿವ ರಾಮಲಿಂಗಾರೆಡ್ಡಿ ಅವರಿಗೂ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠ ಆದೇಶ ಹೊರಡಿಸಿತ್ತು.
ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವವರೆಗೆ ಆದೇಶವನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪರ ವಕೀಲರು ಕೋರ್ಟ್ಗೆ ಮನವಿ ಮಾಡಿದ್ದರಾದರೂ ಈ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು.










