ಹೊಸ ವರ್ಷ ದಿನದಂದೇ ದುರಂತ – ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಮಂದಿ ಸಾವು…

69

ಶ್ರೀನಗರ : ಹೊಸ ವರ್ಷ ದಿನದಂದೇ ದುರಂತ ಸಂಭವಿಸಿದೆ. ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ಮಂದಿರದಲ್ಲಿ ಕಾಲ್ತುಳಿತದಿಂದಾಗಿ 12 ಮಂದಿ ಸಾವನ್ನಪ್ಪಿದ್ದಾರೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕಾಗಿ ಸಾವಿರಾರು ಭಕ್ತರು ದೇವಾಲಯಕ್ಕೆ ಆಗಮಿಸಿದ್ದರು. ಈ ವೇಳೆ ನೂಕಾಟ ಆಗಿ ಕೆಲವರು ಕಾಲ್ತುಳಿತದಿಂದ ಮೃತಪಟ್ಟಿದ್ದಾರೆ. ಇನ್ನೂ ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಏರುವ ಸಂಭವವಿದೆ.

ಜಮ್ಮು-ಕಾಶ್ಮೀರ ಸರ್ಕಾರವು ವೈಷ್ಣೋದೇವಿ ದೇವಾಲಯದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಪರಿಹಾರಾರ್ಥವಾಗಿ ತಲಾ 10 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ. ಜೊತೆಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ. ಇನ್ನು ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಪ್ರಕಟಿಸಲಾಗಿದೆ.

ದುರ್ಘಟನೆ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಲ್ಲಿ ಭಕ್ತರ ಸಾವಿನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.