ಶಿವಮೊಗ್ಗ: ಎರಡು ಪ್ರತ್ಯೇಕ ಪ್ರಕರಣದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಜ.14 ರಂದು ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದ ಬಳಿಯ ಮಾಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಸ್ಪರ್ಧೆ ವೇಳೆ ರಂಗನಾಥ್ ಎಂಬ 24 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿತ್ತು. ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ರಂಗನಾಥ್ ಮೃತಪಟ್ಟಿದ್ದಾರೆ.
ಮತ್ತೊಂದೆಡೆ ಶಿವಮೊಗ್ಗ ತಾಲೂಕಿನ ಕೊನಗನವಳ್ಳಿಯಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಲೋಕೇಶ್ ಎಂಬ 32 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ನಿನ್ನೆ ಕೊನಗನವಳ್ಳಿಯ ಹೋರಿ ಬೆದರಿಸುವ ಸ್ಪರ್ಧೆ ನೋಡಲು ಹೋಗಿದ್ದ ಶಿವಮೊಗ್ಗ ನಗರ ಆಲ್ಕೊಳದ ನಿವಾಸಿ ಲೋಕೇಶ್ ಗೆ ಹೋರಿ ಎದೆಗೆ ತಿವಿದಿತ್ತು. ಆತ ಕೂಡಾ ಚಿಕಿತ್ಸೆ ಫಲಕಾರಿ ಆಗದೇ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿವೆ.
ಕೊನಗವಳ್ಳಿಯ ಹೋರಿ ಹಬ್ಬದ ಆಯೋಜಕರ ವಿರುದ್ಧ ದೂರು ದಾಖಲಾಗಿದೆ. ಕುಂಸಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










