100 ರೂ. ದೇಣಿಗೆ ಸುತ್ತೋಲೆ : ಇದಕ್ಕೂ ನಮಗೂ ಸಂಬಂಧವಿಲ್ಲ ಎಂದ ಸಚಿವ ನಾಗೇಶ್.

69
firstsuddi

ಮೈಸೂರು : ಸರ್ಕಾರಿ ಶಾಲೆಗಳ ಶ್ರೇಯೋಭಿವೃದ್ಧಿಗೆ ಹಣ ಸಂಗ್ರಹ ವಿಚಾರದಲ್ಲಿ ಶಿಕ್ಷಣ ಸಚಿವರು, ಮುಖ್ಯಮಂತ್ರಿಗಳಿಗೆ ಸಂಬಂಧ ಇಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ ನೀಡಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ 100 ರೂಪಾಯಿ ಹಣ ಸಂಗ್ರಹ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಹೊರಡಿಸಿರುವ ಸುತ್ತೋಲೆ. ಈ ಬಗ್ಗೆ ಕೆಲವರು ಸರಿಯಾಗಿ ಓದಿಕೊಳ್ಳದೇ ಪ್ರತಿಕ್ರಿಯೆ ನೀಡಿದ್ದಾರೆ. ಎಸ್ ಡಿಎಂಸಿಗಳ ಸಲಹೆ ಮೇರೆಗೆ ಸುತ್ತೋಲೆ ಹೊರಡಿಸಲಾಗಿದೆ. ಎಲ್ಲ ಸುತ್ತೋಲೆಗಳನ್ನ ಸರ್ಕಾರದ ಗಮನಕ್ಕೆ ತಂದು ಹೊರಡಿಸಬೇಕಿಲ್ಲ. ಹಣ ಸಂಗ್ರಹಿಸಲು ಆರ್ ಟಿಇ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಆರ್ ಟಿಇ ಒಳ್ಳೆಯ ಕಾಯ್ದೆ, ಅದನ್ನು ಜಾರಿಗೆ ತಂದಿದ್ದು ಸಿದ್ದರಾಮಯ್ಯ. ಪೋಷಕರು ಕಡ್ಡಾಯವಾಗಿ ಹಣ ಕೊಡಬೇಕು ಎಂದು ಹೇಳಿಲ್ಲ. ಅವರಾಗಿಯೇ ತಿಂಗಳಿಗೆ 100 ರೂ. ಕೊಟ್ಟರೆ ರಶೀದಿ ಕೊಡಬೇಕು. ಹಣ ದುರುಪಯೋಗವಾದರೆ ಸುತ್ತೋಲೆ ಹಿಂಪಡೆಯಲಾಗುವುದು ಎಂದು ಸಚಿವರು ತಿಳಿಸಿದರು.

ಸುತ್ತೋಲೆಯಲ್ಲಿ ಏನಿದೆ?
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು ಶಾಲೆಯ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್ ಡಿಎಮ್ ಸಿಗಳಿಗೆ ಅವಕಾಶ ನೀಡಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಸಲು ಪ್ರತಿ ವರ್ಷ ಸರ್ಕಾರ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ, ಕೆಲವೊಮ್ಮೆ ಅಗತ್ಯತೆಗೆ ಹೆಚ್ಚುವರಿ ಹಣಕಾಸಿನ ನೆರವು ಬೇಕಾಗುವುದರಿಂದ, ಪ್ರತಿ ವಿದ್ಯಾರ್ಥಿಗಳ ಪೋಷಕರಿಂದ ದಾನ ದೇಣಿಗೆ, ಕೊಡುಗೆ ರೂಪದಲ್ಲಿ ಮಾಸಿಕ 100 ರೂಪಾಯಿ ಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಾತೆಗೆ ಸಂದಾಯ ಮಾಡಿಕೊಂಡು ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಸಬಹುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.