ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಆರ್ಭಟ ಮುಂದುವರೆದಿದ್ದು, ಇಂದು ಒಂದೇ ದಿನ 18 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 463ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲೇ ಇಂದು 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಬಿಹಾರಿ ಮೂಲದ ಕಾರ್ಮಿಕನಿಂದ 5 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಬಾಗಲಕೋಟೆ-2, ಬೆಳಗಾವಿ-2, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 463 ಮಂದಿ ಸೋಂಕಿತರ ಪೈಕಿ 150 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 18 ಮಂದಿ ಬಲಿಯಾಗಿದ್ದಾರೆ.










