ಪಣಜಿ : ಗೋವಾ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮೋದ್ ಸಾವಂತ್ ಅವರು ಇಂದು ಪ್ರಮಾಣವಚನ ಸ್ವೀಕರಿಸಿದರು. ಪಣಜಿ ಬಳಿಯ ಡಾ ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಗೋವಾ ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರು ಸಾವಂತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಹಿಮಾಚಲ ಪ್ರದೇಶದ ರಾಜ್ಯಪಾಲ ರಾಜೇಂದ್ರ ಅರ್ಲೇಕರ್, ಸೇರಿದಂತೆ ಹಲವಾರು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮನೋಹರ್ ಪರಿಕ್ಕರ್ ಅವರ ನಿಧನದ ನಂತರ ಪ್ರಮೋದ್ ಸಾವಂತ್ ಮಾರ್ಚ್ 2019ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಎರಡನೇ ಅವಧಿಗೆ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬಾರಿ ನಡೆದ 40 ಕ್ಷೇತ್ರಗಳ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 20 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.










