ಬೆಂಗಳೂರು : ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗೆ ದಿನಾಂಕ ಪ್ರಕಟ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಅವರು ವೃತ್ತಿ ಶಿಕ್ಷಣಕ್ಕೆ ಪ್ರವೇಶಾವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯನ್ನು ಈ ಬಾರಿ ಜೂನ್ 16, 17 ಮತ್ತು 18ರಂದು ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ.
ಜೂನ್ 16ರಂದು ಜೀವಶಾಸ್ತ್ರ, ಗಣಿತ, 17ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಹಾಗೂ 18ರಂದು ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 5ರಿಂದ 20ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಆನ್ ಲೈನ್ ಮೂಲಕವೇ ನಿಗದಿತ ಶುಲ್ಕ ಪಾವತಿಸಲು ಏ.22ರವರೆಗೆ ಅವಕಾಶವಿದೆ. ಮೇ 2ರಿಂದ 6ರವರೆಗೂ ವಿದ್ಯಾರ್ಥಿಗಳಿಗೆ ಅರ್ಜಿಯಲ್ಲಿನ ಲೋಪ ಸರಿಪಡಿಸಲು ಅವಕಾಶ ನೀಡಲಾಗಿದೆ. ಇದಾದ ಬಳಿಕ ವಿದ್ಯಾರ್ಥಿಗಳು ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಮಾಹಿತಿ ನೀಡಿದರು.










