ನವದೆಹಲಿ: ಐದನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಶಾಲಾ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಮಾ.14 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆರೋಪಿ ಶಾಲಾ ಸಹಾಯಕ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೂ ಆತನ ಮೂವರು ಸಹಚರರ ಬಂಧನಕ್ಕೆ ಬಲೆ ಬೀಸಿದ್ದಾರೆ.
ಘಟನೆಯ ನಂತರ ಬಾಲಕಿ ಶಾಲೆಗೆ ಹೋಗುವುದನ್ನು ನಿಲ್ಲಿಸಿದ್ದಳು. ಪರೀಕ್ಷೆಗೆ ಸಹ ಹಾಜರಾಗಿರಲಿಲ್ಲ. ಶಿಕ್ಷಕರು ಆಕೆಯ ಸಹೋದರನನ್ನು ಸಂಪರ್ಕಿಸಿ ಅಂತಿಮ ಪರೀಕ್ಷೆಗೆ ಹಾಜರಾಗದ ಬಗ್ಗೆ ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ತಕ್ಷಣದ ಕ್ರಮ ಕೈಗೊಳ್ಳದಿರುವ ಕಾರಣ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ತರಗತಿ ಶಿಕ್ಷಕರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಗಾಜಿಯಾಬಾದ್ ನಲ್ಲಿ ವಾಸಿಸುತ್ತಿದ್ದ ಉತ್ತರ ಪ್ರದೇಶದ ಜೌನ್ ಪುರ ಮೂಲದ ಅಜಯ್ ಕಳೆದ 10 ವರ್ಷಗಳಿಂದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್ ಶಾಲೆಯಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.










