ನವದೆಹಲಿ : ಕೇಂದ್ರ ಸರ್ಕಾರ ಚೀನಾ ಸೇರಿದಂತೆ 5 ದೇಶಗಳಿಂದ ಬರುವ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಿದೆ.
ಚೀನಾ, ಹಾಂಕಾಂಗ್, ಜಪಾನ್, ದಕ್ಷಿಣ ಕೊರಿಯಾ, ಥಾಯ್ಲೆಂಡ್ ಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಆರ್ಟಿಪಿಸಿಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ವರದಿಯಲ್ಲಿ ಪಾಸಿಟಿವ್ ಬಂದರೆ ಅಂಥವರನ್ನು ಪ್ರತ್ಯೇಕವಾಗಿ ಕ್ವಾರಂಟೈನ್ ಮಾಡಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚಿರುವ ಈ ದೇಶಗಳಿಂದ ಬರುವ ಅಂತಾರಾಷ್ಟ್ರೀಯ ಪ್ರಯಾಣಿಕರು ‘ಏರ್ ಸುವಿಧಾ’ದಲ್ಲಿ ಸದ್ಯದ ಆರೋಗ್ಯ ಸ್ಥಿತಿಯ ಬಗ್ಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಪಾಸಿಟಿವ್ ಬಂದ ಪ್ರಯಾಣಿಕರ ಮೇಲೆ ಅಧಿಕಾರಿಗಳು ನಿರಂತರವಾಗಿ ನಿಗಾ ವಹಿಸಲಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯವಾಗಿದೆ. ವಿಮಾನ ನಿಲ್ದಾಣಗಳಲ್ಲಿ ರ್ಯಾಂಡಮ್ ಟೆಸ್ಟ್ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಮನ್ಸುಖ್ ಮಾಂಡವೀಯ ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಜೊತೆ ನಿನ್ನೆ ಸಭೆ ನಡೆಸಿದ್ದರು. ಚೀನಾದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ದೇಶದಲ್ಲೂ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ.










