ಭೋಪಾಲ್ : 50 ಅಡಿ ಎತ್ತರದ ಸೇತುವೆಯಿಂದ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ 15 ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ನಡೆದಿದೆ.
ಅಂದಾಜು 80 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್, 50 ಅಡಿ ಎತ್ತರದ ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 15 ಮಂದಿ ದುರ್ಮರಣಕ್ಕೀಡಾಗಿದ್ದು, ಕನಿಷ್ಠ 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇಂದೋರ್‌ಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಡೊಂಗರ್‌ಗಾಂವ್ ಪ್ರದೇಶದಲ್ಲಿ ಸೇತುವೆಯಿಂದ ಕೆಳಗೆ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣದ ಕುರಿತಾಗಿ ನ್ಯಾಯಾಂಗ ತನಿಖೆಗೆ ಆದೇಶ ನೀಡಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರಿಗೆ 5 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 50,000 ರೂಪಾಯಿ ಮತ್ತು ಸಣ್ಣಪುಟ್ಟ ಗಾಯಗಳಾಗಿರುವವರಿಗೆ 25,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.










