ಬೆಂಗಳೂರು: ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ರಾಜ್ಯದ 156 ತಾಲೂಕುಗಳಲ್ಲಿ ಬರಗಾಲವಿದೆ. ಜಾನುವಾರುಗಳಿಗೆ ನೀರಿಲ್ಲ. ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬೇಜವಾಬ್ದಾರಿಯಿಂದ ವಿದೇಶ ಪ್ರವಾಸಕ್ಕೆ ತೆರಳಿರುವುದು ಎಷ್ಟು ಸರಿ..? ನಾವು ಯಾವ ಶಾಸಕರನ್ನು ಸಂಪರ್ಕ ಮಾಡಿಲ್ಲ. ಆಪರೇಷನ್ ಕಮಲದ ಮೂಲಕ ಶಾಸಕರ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅವರು ಪದೇ ಪದೇ ಬೇಜವಾಬ್ದಾರಿ ಹೇಳಿಕೆಯನ್ನು ನೀಡುತ್ತಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಬಿಜೆಪಿಯವರು ಮಾಡುತ್ತಿಲ್ಲ. ಒಂದು ವೇಳೆ ಸರ್ಕಾರ ಬಿದ್ದರೆ ನಾವು ಸರ್ಕಾರ ರಚನೆ ಮಾಡುತ್ತೇವೆ. ಸುಮ್ಮನೆ ಕೂರಲು ನಾವು ಸನ್ಯಾಸಿಗಳಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.










