ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಶಿಕ್ಷಣವಂತರನ್ನಾಗಿಸುವುದರ ಜೊತೆಗೆ ಅವರನ್ನು ದೇಶಭಕ್ತರನ್ನಾಗಿಯೂ ರೂಪಿಸಬೇಕು: ಪತ್ತಾರ್…

214
firstsuddi

ಚಿಕ್ಕಮಗಳೂರು: ಮಕ್ಕಳು ವಿದ್ಯಾರ್ಥಿದೆಸೆಯಿಂದಲೇ ದೇಶಭಕ್ತಿ ಮತ್ತು ರಾಷ್ಟ್ರಪ್ರೇಮವನ್ನು ಮೈಗೂಡಿಸಿಕೊಳ್ಳಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಪತ್ತಾರ್ ಸಲಹೆ ಮಾಡಿದರು.
ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಭಾರತ ಸೇವಾದಳದ ಜ್ಞಾನಜ್ಯೋತಿ ಘಟಕದಿಂದ ಗುರುವಾರ ನಡೆದ ಭಾರತ ಸೇವಾದಳ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆಯಲ್ಲಿ ರಾಷ್ಟ್ರಭಕ್ತಿ ಮತ್ತು ದೇಶಪ್ರೇಮದ ಕೊರತೆಯಿದೆ, ಇದರಿಂದಾಗಿ ದೇಶದ ಪ್ರಗತಿಗೆ ಹಿನ್ನಡೆಯಾಗಿದೆ ಎಂದ ಅವರು ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಶಿಕ್ಷಕರು ಮಕ್ಕಳನ್ನು ಶಿಕ್ಷಣವಂತರನ್ನಾಗಿಸುವುದರ ಜೊತೆಗೆ ಅವರನ್ನು ದೇಶಭಕ್ತರನ್ನಾಗಿಯೂ ರೂಪಿಸಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಜಗದೀಶಾಚಾರ್ ಮಾತನಾಡಿ ಇಂದಿನ ಪೀಳಿಗೆ ದೇಶ ನಮಗೇನು ಮಾಡಿದೆ ಎನ್ನುವುದಕ್ಕಿಂತ ದೇಶಕ್ಕೆ ನಾವೇನು ನೀಡಿದ್ದೇವೆ ಎಂಬ ಬಗ್ಗೆ ಚಿಂತನೆ ನಡೆಸಬೇಕು ಎಂದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸುಂದರೇಶ್ ಮಾತನಾಡಿ ಇಂದಿನ ಯುವ ಜನತೆ ದೇಶಕ್ಕಾಗಿ ಬದುಕುವುದನ್ನು ಕಲಿಯಬೇಕು ಎಂದು ಸಲಹೆ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಭಾರತಸೇವಾದಳದ ತಾಲ್ಲೂಕು ಸಂಘಟಕ ಎಸ್.ಈ.ಲೋಕೇಶ್ವರಾಚಾರ್ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮತ್ತು ರಾಷ್ಟ್ರಪೇಮವನ್ನು ಬೆಳೆಸುವ ಉದ್ದೇಶದಿಂದ ಪ್ರತಿವರ್ಷ ಸೇವಾದಳ ಸಪ್ತಾಹವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಸಪ್ತಾಹದ ಅಂಗವಾಗಿ ನಡೆಸಲಾದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿವಿಧ ಶಾಲೆಗಳ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರ ವಿತರಿಸಲಾಯಿತು.
ಗೃಹಮಂಡಳಿ ಬಡಾವಣೆಯ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಶಂಕರೇಗೌಡ ಅವರನ್ನು ಸನ್ಮಾನಿಸಲಾಯಿತು.
ಮುಖ್ಯಶಿಕ್ಷಕಿ ಬಿ.ಆರ್.ಗೀತಾ ಅಧ್ಯಕ್ಷತೆ ವಹಿಸಿದ್ದರು, ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಮಹೇಶ್ವರಪ್ಪ, ಶಿಕ್ಷಕರಾದ ಮೀನಾಕ್ಷಿ, ವೇದಾವತಿ, ತಿಪ್ಪೇರುದ್ರಪ್ಪ ಉಪಸ್ಥಿತರಿದ್ದರು.
ಶಿಕ್ಷಕರಾದ ಜಯಂತಿ ಕಾರ್ಯಕ್ರಮವನ್ನು ನಿರೂಪಿಸಿದರು, ಸಾವಿತ್ರಮ್ಮ ಸ್ವಾಗತಿಸಿದರು, ಸೇವಾದಳದ ಜಿಲ್ಲಾ ಸಂಘಟಕ ಚಂದ್ರಕಾಂತ್ ವಂದಿಸಿದರು.