ಚಿಕ್ಕಮಗಳೂರು : ಜಿಲ್ಲೆಯ ನರಸಿಂಹರಾಜಪುರ ಸಮೀಪದ ಹುಲ್ಲುಗಾರ್ ಬೈಲ್ ರಸ್ತೆಯನ್ನು ದುರಸ್ತಿ ಪಡಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಂ ಅವರನ್ನು ಬುಧವಾರ ಭೇಟಿ ಮಾಡಿದ ಸಮಿತಿಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.ಹುಲ್ಲುಗಾರ್ ಬೈಲ್ ರಸ್ತೆ ಕಳೆದ ಕೆಲ ವರ್ಷಗಳಿಂದ ಸಂಪೂರ್ಣ ಹಾಳಾಗಿದ್ದು, ವಾಹನ ಮತ್ತು ಜನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ರಸ್ತೆ ದುರಸ್ತಿಗಾಗಿ ಜಿಲ್ಲಾ ಪಂಚಾಯಿತಿ 21 ಲಕ್ಷ ರೂ ಅನುದಾನ ಬಿಡುಗಡೆ ಮಾಡಿದ್ದರೂ ಇದುವರೆಗೂ ಕಾಮಗಾರಿ ಆರಂಭಗೊಂಡಿಲ್ಲ ಎಂದು ದೂರಿದರು.
ಮಳೆಗಾಲ ಆರಂಭವಾದರೆ ವಾಹನ ಮತ್ತು ಜನ ಸಂಚಾರಕ್ಕೆ ತೀವ್ರ ತೊಂದರೆಯಾಗುವ ಹಿನ್ನೆಲೆಯಲ್ಲಿ ತಕ್ಷಣ ಕಾಮಗಾರಿ ಆರಂಭಿಸಬೇಕು, ಜರ್ಝರಿತಗೊಂಡು ಬೀಳುವ ಸ್ಥಿತಿಯಲ್ಲಿರುವ ಮಹಲ್‍ಗೋಡಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡವನ್ನು ತಕ್ಷಣ ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಾಗುಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಸಿನ ಗದ್ದೆ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು, ಭೈರಾಪುರ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸಬೇಕು, 94ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಪ.ಜಾತಿ/ಪ.ವರ್ಗದವರಿಗೆ ಭೂಮಿ ಹಕ್ಕು ಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಕರ್ಕೆಶ್ವರ ಗ್ರಾಮದ ಗದ್ದೆಮನೆ ಬಳಿಯಿರುವ ಕೆರೆಗೆ ತಡೆಗೋಡೆ ನಿರ್ಮಿಸಬೇಕು ಎಂದು ಆಗ್ರಹಿಸಿದರು. ಮನವಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಡಾ|| ಬಗಾಧಿ ಗೌತಂ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಚುನಾವಣೆ ನಂತರ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ, ಸಂಘಟನಾ ಸಂಚಾಲಕ ಎಸ್.ಎನ್.ಮಹೇಂದ್ರ ಸ್ವಾಮಿ, ನರಸಿಂಹರಾಜಪುರ ತಾಲ್ಲೂಕು ಸಂಚಾಲಕ ಗಂಗಯ್ಯ, ರೈತ ಸಂಘದ ಮುಖಂಡ ಆರ್.ಆರ್.ಮಹೇಶ್, ಸಮಿತಿಯ ಪದಾಧಿಕಾರಿಗಳಾದ ಆರ್.ಶೇಖರ್, ಎಂ.ಎಸ್.ನಾಗರಾಜ್, ದೊಡ್ಡಯ್ಯ, ಮಂಜುನಾಥ್, ಶೇಖರ್ ಹಾಜರಿದ್ದರು.










