ಹಾಸನ : ಚನ್ನರಾಯಪಟ್ಟಣದಲ್ಲಿ ಇಂದು ಮಾಜಿಶಾಸಕ ಸಿ.ಎಸ್.ಪುಟ್ಟೇಗೌಡ ಅವರ ನಿವಾಸದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಸಭೆಯನ್ನು ಉದ್ದೇಶಿಸಿ ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ ಅವರು ಬಾಷಣ ಆರಂಭಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಸಭೆಯಲ್ಲಿ ಪ್ರದಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಪ್ರದರ್ಶಿಸಿ ನಾವು ಜೆಡಿಎಸ್ ಗೆ ಮತ ಹಾಕುವುದಿಲ್ಲ ಬಿಜೆಪಿಗೆ ಮತ ಹಾಕುತ್ತೇವೆ ಎಂದು ಘೋಷಣೆ ಕೂಗಿದ್ದು, ಬಳಿಕ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ತಳ್ಳಾಡಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿಗಳನ್ನು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿ ಎಂ.ಎಲ್.ಸಿ. ಗೋಪಾಲಸ್ವಾಮಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಾವಗಲ್ ಮಂಜುನಾಥ್ ಅವರು ಸೇರಿದಂತೆ ಹಲವು ಮುಖಂಡರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾರ್ಯಕರ್ತರನ್ನು ಸಮಾಧಾನಗೊಳಿಸಲು ಮುಖಂಡರು ಹರಸಾಹಸಪಟ್ಟರು.









