ಚಿಕ್ಕಮಗಳೂರು : ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ವಿನಯ ಮತ್ತು ವಿಧೇಯತೆಯನ್ನೂ ಮೈಗೂಡಿಸಿಕೊಳ್ಳಬೇಕು : ಜೆಸಿಂತಾ ಅನಿಲ್‍ಕುಮಾರ್…

286
firstsuddi

ಚಿಕ್ಕಮಗಳೂರು : ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ವಿನಯ ಮತ್ತು ವಿಧೇಯತೆಯನ್ನೂ ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜೆಸಿಂತಾ ಅನಿಲ್‍ಕುಮಾರ್ ಸಲಹೆ ಮಾಡಿದರು.
ನಗರದ ಸಂತ ಜೋಸೇಫರ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ ಕ್ರೀಡೆ, ಸಾಂಸ್ಕೃತಿಕ ಎನ್.ಎಸ್.ಎಸ್ ಮತ್ತು ರೆಡ್‍ಕ್ರಾಸ್ ಘಟಕಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಶಿಕ್ಷಣವಂತರ ಸಂಖ್ಯೆ ಹೆಚ್ಚುತ್ತಿದೆ ಆದರೆ ವಿದ್ಯಾವಂತರಲ್ಲಿ ವಿನಯ, ವಿಧೇಯತೆ, ಶಿಸ್ತು, ಸಂಸ್ಕಾರ ಮತ್ತು ಸಂಸ್ಕೃತಿ ಮರೆಯಾಗುತ್ತಿದೆ, ಯುವಜನತೆಯಲ್ಲಿ ಸ್ವೇಚ್ಚಾಚಾರ ಪ್ರವೃತ್ತಿ ಬೆಳೆಯುತ್ತಿದೆ ಎಂದು ವಿಷಾದಿಸಿದರು.
ಈ ಹಿನ್ನೆಲೆಯಲ್ಲಿ ಪೋಷಕರು ಮತ್ತು ಶಿಕ್ಷಕರು ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ವಿನಯ, ವಿಧೇಯತೆಯನ್ನೂ ಕಲಿಸಬೇಕು, ಅವರಲ್ಲಿ ನಮ್ಮ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಬೆಳೆಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೋಲಿ ಫ್ಯಾಮಿಲಿ ಚರ್ಚ್‍ನ ಧರ್ಮಾಧ್ಯಕ್ಷ ಫಾದರ್ ಪೀಟರ್ ಬ್ರಾಂಕ್ ವಿದ್ಯಾರ್ಥಿಗಳು ಗುರುಹಿರಿಯರನ್ನು ಗೌರವಿಸುವುದು ಕಲಿಯಬೇಕು ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ವಿನ್ಸೆಂಟ್ ಕಾರ್ಡೋಜಾ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಪಾಲ್ಗೊಳ್ಳಬೇಕು ಆ ಮೂಲಕ ನಾಯಕತ್ವ ಗುಣ ಮತ್ತು ಸೇವಾಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂಬ ಉದ್ದೇಶದಿಂದ ಕಾಲೇಜಿನಲ್ಲಿ ವಿವಿಧ ಘಟಕಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ವಿಜಯಾ ಬ್ಯಾಂಕ್‍ನ ವ್ಯವಸ್ಥಾಪಕ ರಕ್ಷಿತ್ ಬೊಂಗಾಳೆ, ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಎಂ.ಎ.ವಿನಯ್ ಕುಮಾರ್ ಉಪಸ್ಥಿತರಿದ್ದರು.