ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧದ ಮೂರು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್…

199
firstsuddi

ಬೆಂಗಳೂರು : 2014ರ ಲೋಕಸಭಾ ಚುನಾವಣೆಯ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ದಾಖಲಾಗಿದ್ದ ಮೂರು ಪ್ರಕರಣಗಳನ್ನು ಹೈಕೋರ್ಟ್ ರದ್ದುಗೊಳಿಸಿದೆ. ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಹಾಗೂ ಪಕ್ಷದ ಕಾರ್ಯಕರ್ತರು ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯುಂಟು ಮಾಡಿದ್ದಾರೆ ಎಂದು ಆರೋಪಿಸಿ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಚುನಾವಣಾಧಿಕಾರಿಗಳು ಚಿಕ್ಕಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ 188 ಮತ್ತು 341ರ ಅಡಿಯಲ್ಲಿ ಮೂರು ಪ್ರಕರಣಗಳನ್ನು ದಾಖಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಭಾರತೀಯ ದಂಡ ಸಂಹಿತೆ 186ರ ಕಲಂ 188 ಮತ್ತು 341ರ ಅಡಿಯಲ್ಲಿ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸಬೇಕೆಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಆರ್. ದೇವದಾಸ್ ಅವರ ನೇತೃತ್ವದ ಏಕಸದಸ್ಯ ಪೀಠ ಕುಮಾರಸ್ವಾಮಿ ಅವರ ವಿರುದ್ಧದ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಿರುವುದು ಕಾನೂನು ಬಾಹಿರ ಎಂದು ತಿಳಿಸಿ ಮೂರು ಪ್ರಕರಣಗಳನ್ನು ರದ್ದುಗೊಳಿಸಿದೆ.