ರಾಹುಲ್ ಗಾಂಧಿ ಅವರ “ರೇಪ್ ಇನ್ ಇಂಡಿಯಾ” ಹೇಳಿಕೆ- ಕ್ಷಮೆಯಾಚಿಸುವಂತೆ ಬಿಜೆಪಿ ಆಗ್ರಹ…

172
firstsuddi

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾ ರೇಪ್ ಇನ್ ಇಂಡಿಯಾ ಆಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆ ಸಂಸತ್‍ನಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಗಿದ್ದು, ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವೆ ಭಾರಿ ಮಾತಿನ ಚಕಮಕಿಯಿಂದ ಕೆಲಕಾಲ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ಮುಂದೂಡಲಾಗಿತ್ತು. ರಾಹುಲ್ ಗಾಂಧಿ ಅವರು ನಿನ್ನೆ ಜಾರ್ಖಂಡ್‍ನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಮೇಕ್ ಇನ್ ಇಂಡಿಯಾ ಎಂದು ಘೋಷಣೆ ಮಾಡಿದ್ದಾರೆ. ಆದರೆ ದೇಶದ ಯಾವುದೇ ಮೂಲೆಯಲ್ಲಿ ನೋಡಿದರೂ ರೇಪ್ ಇನ್ ಇಂಡಿಯಾ ಕಾಣುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆ ಸಂಸತ್‍ನಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಸಂಸದರು ರಾಹುಲ್ ಗಾಂಧಿ ಅವರು ಕೂಡಲೇ ಬಿಜೆಪಿಯವರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಕಾಂಗ್ರೆಸ್ ಸದಸ್ಯರು ಆಕ್ಷೇಪಿಸಿದರು.