ಹುಬ್ಬಳ್ಳಿ : ನವಲಗುಂದ ಹಾಗೂ ನರಗುಂದ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ಕಾಮಗಾರಿಗಳಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಧಾರವಾಡ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂ ಪೂಜೆ ನೆರವೇರಿಸುವ ಸಲುವಾಗಿ, ಬೆಂಗಳೂರಿನಿಂದ ವಿಷೇಶ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ. ಒಂದಾದ ನಂತರ ಒಂದು ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ರೈತನ ಒಳಿತಿಗಾಗಿ ಶ್ರಮಿಸಲಾಗುತ್ತಿದೆ. ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕುವಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಉಪಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ 12 ಸ್ಥಾನಗಳಲ್ಲಿ ಗೆಲುವು ದೊರೆತಿರುವುದು, ಯಾವುದೇ ಅಡ್ಡಿ ಆತಂಕ ಇಲ್ಲದೆ ಮೂರುವರೆ ವರ್ಷಗಳ ಕಾಲ ಆಡಳಿತ ನೀಡಲು ಅವಕಾಶ ಕಲ್ಪಿಸಿದೆ. ಇನ್ನೂ ಆರು ತಿಂಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಬದಲಾವಣೆ ಮಾಡಲಿದ್ದೇವೆ. ಡಿಸೆಂಬರ್ ತಿಂಗಳ ಅಂತ್ಯದಲ್ಲಿ ದೆಹಲಿಗೆ ತೆರಳಿ ಪಕ್ಷದ ಅಧ್ಯಕ್ಷರು ಹಾಗೂ ಪ್ರಧಾನಿಗಳನ್ನು ಭೇಟಿಯಾಗಿ ಚರ್ಚಿಸಿದ ನಂತರ, ಪಕ್ಷವನ್ನು ಬೆಂಬಲಿಸಿ ಚುನಾವಣೆಯಲ್ಲಿ ವಿಜೇತರಾದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು.
ಪ್ರಧಾನ ಮಂತ್ರಿಗಳು ಜನವರಿ 2 ರಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಜನವರಿ 3 ರಂದು ಬೃಹತ್ ಸಮಾವೇಶವನ್ನು ಏರ್ಪಡಿಸಿ ಸಚಿವ ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಾಲಯದೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಮಹಾದಾಯಿ ಹೋರಾಟ ಬಹುದಿನಗಳದ್ದು, ಗೋವಾ ಹಾಗೂ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಆದಷ್ಟೂ ಬೇಗ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದರು.










