ಬೆಳಗಾವಿ : ಸರ್ಕಾರದ ವಿರುದ್ಧ ವ್ಯಂಗ್ಯವಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಯಿಸಿದ್ದು, ಸಿದ್ದರಾಮಯ್ಯ ಅವರ ಕಣ್ಣು ಕಾಮಾಲೆಯಾಗಿದೆ. ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ. ಯಾರು ದರಿದ್ರರು ಎಂಬುವುದನ್ನು ರಾಜ್ಯದ ಜನರೇ ತೀರ್ಮಾನ ಮಾಡುತ್ತಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯಕ್ಕೆ ಒಳ್ಳೆಯ ಬಜೆಟನ್ನೇ ಕೊಟ್ಟಿದ್ದಾರೆ. ವಿಶೇಷವಾಗಿ ನೀರಾವರಿ, ಸಮಾಜ ಕಲ್ಯಾಣ ಇಲಾಖೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿದ್ದಾರೆ. ಇದೊಂದು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್. ಸದನದಲ್ಲಿ ಚರ್ಚಿಸಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಅನುದಾನವನ್ನು ನೀಡಿದ್ದಾರೆ. ಇದಕ್ಕೆ ನಾನು ಯಡಿಯೂರಪ್ಪ ಅವರಿಗೆ ಅಭಿನಂದನೆಯನ್ನು ತಿಳಿಸುತ್ತೇನೆ ಎಂದರು.