ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಕೊರೊನಾ ಪ್ರಕರಣ ದೃಢಪಟ್ಟಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಕ್ಯೆ 84 ಕ್ಕೆ ಏರಿಕೆಯಾಗಿದೆ. ತಮಕೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟ ವೃದ್ಧನ 13 ವರ್ಷದ ಮಗನಿಗೆ ಕೊರೊನಾ ಸೋಂಕು ತಗುಲಿರುವುದಾಗಿ ದೃಢವಾಗಿದೆ. ಎರಡು ದಿನಗಳ ಹಿಂದೆ ತುಮಕೂರಿನಲ್ಲಿ ಕೊರೊನಾ ಸೋಂಕಿತ ವೃದ್ಧ ಮೃತಪಟ್ಟ ಬಳಿಕ ವೃದ್ಧನ ಕುಟುಂಬದ 20 ಮಂದಿಯ ರಕ್ತದ ಮಾದರಿ ಹಾಗೂ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಬಂದಿದ್ದು, ವೃದ್ಧನ ಕುಟುಂಬದ 19 ಜನರ ವರದಿ ನೆಗೆಟಿವ್ ಬಂದಿದ್ದು, 13 ವರ್ಷದ ಬಾಲಕನಲ್ಲಿ ಕೊರೊನಾ ಲಕ್ಷಣಗಳು ಕಂಡು ಬಂದಿದ್ದರಿಂದ ಮಾರ್ಚ್ 25ರಿಂದ ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ಬಳಿಕ ಬಾಲಕನಲ್ಲಿ ಸೋಂಕು ತಗುಲಿರುವುದು ದೃಢಪಟ್ಟ ಹಿನ್ನೆಲೆ, ಚಿಕಿತ್ಸೆಗಾಗಿ ಬೆಂಗಳೂರಿನ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಅವರು ತಿಳಿಸಿದ್ದಾರೆ.










