ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು 21 ದಿನಗಳ ಕಾಲ ಇಡೀ ದೇಶಾದ್ಯಂತ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ದಾರೆ. ಹೀಗಿದ್ದರೂ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಇಂದು ಒಂದೇ ದಿನ 10 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 98ಕ್ಕೆ ಏರಿಕೆಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು, “ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಬೆಳಿಗ್ಗೆ 8 ಗಂಟೆಯವರೆಗೆ 10 ವ್ಯಕ್ತಿಗಳಲ್ಲಿ ಕೊರೊನಾ ಸೋಂಕು ಖಚಿತವಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 98ಕ್ಕೆ ಏರಿದೆ. ನಾಗರಿಕರು ಮುಂಜಾಗೃತ ಕ್ರಮಗಳನ್ನು ಕೈಗೊಂಡು ಮನೆಯಲ್ಲಿರಬೇಕೆಂದು ವಿನಂತಿಸುತ್ತೇನೆ”. ಎಂದು ತಮ್ಮ ಟ್ವಿಟರ್ ಮೂಲಕ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.










