ಉತ್ತರ ಪ್ರದೇಶ : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಇಡೀ ದೇಶವನ್ನೇ ಲಾಕ್ಡೌನ್ ಮಾಡಲಾಗಿದ್ದು, ಈ ವೇಳೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಹೇಳಿದ ಹಿರಿಯ ಸಬ್-ಇನ್ಸ್ಪೆಕ್ಟರ್ ಮೇಲೆ ಹೆಡ್ ಕಾನ್ಸ್ಟೇಬಲ್ ಒಬ್ಬರು ಲಾಠಿಯಿಂದ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಹಲ್ಲೆ ನಡೆಸಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ಬಳಿಕ ಕೊಟ್ವಾಲಿ ಪೊಲೀಸ್ ಠಾಣೆಯ ಪೊಲೀಸರು ಹೆಡ್ ಕಾನ್ಸ್ಟೇಬಲ್ ರಾಮಶ್ರೇ ಅವರನ್ನು ಅಮಾನತುಗೊಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಲ್.ಆರ್. ಕುಮಾರ್ ಅವರು ಲಾಕ್ಡೌನ್ ವೇಳೆ ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣ ಹಿರಿಯ ಸಬ್-ಇನ್ಸ್ಪೆಕ್ಟರ್ ರಮೇಶ್ ಚೌಹಾಣ್ ಅವರು ಹೆಡ್ ಕಾನ್ಸ್ಟೇಬಲ್ ರಾಮಶ್ರೇ ಅವರಿಗೆ ಸರಿಯಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಹೆಡ್ ಕಾನ್ಸ್ಟೇಬಲ್ ರಮೇಶ್ ಚೌಹಾಣ್ ಅವರಿಗೆ ಲಾಠಿಯಿಂದ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.










