ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ನ ಸಂಕಷ್ಟ ಕಾಲದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಲು ಸಾಲಾಗಿ ಆರ್ಥಿಕ ಪ್ಯಾಕೇಜ್ನ್ನು ಘೋಷಣೆ ಮಾಡುತ್ತಿದ್ದು, ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಶಾ ಕಾರ್ಯಕರ್ತೆಯರಿಗೆ ಹಾಗೂ ರೈತರಿಗೆ ವಿಶೇಷ ಪ್ಯಾಕೇಜ್ನ್ನು ಘೋಷಣೆ ಮಾಡಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ.17ರ ಬಳಿಕ ರಾಜ್ಯದಲ್ಲಿ ಲಾಕ್ಡೌನ್ ಸ್ವಲ್ಪ ಮಟ್ಟಿಗೆ ಸಡಿಲಗೊಳ್ಳಲಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಮಾರ್ಗಸೂಚಿಯಂತೆ ರಾಜ್ಯದಲ್ಲಿ ಕ್ರಮಕೈಗೊಳ್ಳಲಾಗುತ್ತದೆ. ರಾಜ್ಯದಲ್ಲಿ ಹೋಟೆಲ್ಗಳನ್ನು ತೆರೆಯಲು ಚಿಂತನೆ ನಡೆಸಲಾಗಿದೆ. ರಾಜ್ಯದಲ್ಲಿ ಈ ಹಿಂದೆ ನೀಡಲಾಗುತ್ತಿದ್ದ ಪರಿಹಾರವನ್ನು ಮುಂದುವರೆಸಲಾಗುತ್ತದೆ ಎಂದು ತಿಳಿಸಿ ರೈತರು ಹಾಗೂ ಆಶಾ ಕಾರ್ಯಕರ್ತೆಯರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ.
• ನಮ್ಮ ರಾಜ್ಯದಲ್ಲಿ 10 ಲಕ್ಷ ಮೆಕ್ಕೆಜೋಳ ಬೆಳೆಗಾರರಿದ್ದು, ಬೆಳೆಗಾರರಿಗೆ ಯಾವುದೇ ಲಾಭ ಸಿಗುತ್ತಿಲ್ಲ. ಹೀಗಾಗಿ ಮೆಕ್ಕೆಜೋಳ ಬೆಳೆಗಾರರಿಗೆ ತಲಾ 5 ಸಾವಿರ ರೂ ಹಣವನ್ನು ನೀಡಲಾಗುವುದು. ಇದರಿಂದ ಮೆಕ್ಕೆಜೋಳ ಬೆಳೆಗಾರರಿಗೆ ಅನುಕೂಲವಾಗಲಿದೆ.
• 40,250 ಮಂದಿ ಆಶಾಕಾರ್ಯಕರ್ತೆಯರಿಗೆ ತಲಾ 3 ಸಾವಿರ ರೂ. ನೀಡಲಾಗುತ್ತದೆ. ಸಹಕಾರ ಇಲಾಖೆಯಿಂದ ಪ್ರೋತ್ಸಾಹ ಧನ ನೀಡಲಾಗುತ್ತದೆ. ಇದಕ್ಕೆ 12 ಸಾವಿರ ಕೋಟಿ ರೂ ಆಗುತ್ತದೆ. ಮೇಕೆ, ಕುರಿ ಮೃತಪಟ್ಟರೆ 5 ಸಾವಿರ ರೂ ಪರಿಹಾರ ನೀಡುತ್ತೇವೆ. ಈ ಹಿಂದೆ ನೀಡಲಾಗುತ್ತಿದ್ದ ಪರಿಹಾರವನ್ನು ಮುಂದುವರೆಸಿದ್ದೇವೆ ಎಂದು ತಿಳಿಸಿದ್ದಾರೆ.










