ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿ ಸೋಂಕು ಜಿಲ್ಲೆಯ ಜನಪ್ರತಿನಿಧಿಗಳನ್ನು ಬೆಂಬಿಡದೆ ಕಾಡುತ್ತಿದೆ. ಕಳೆದ ಮೂರು ದಿನಗಳ ಹಿಂದೆ ಎಂಎಲ್‍ಸಿ ಎಂ.ಕೆ. ಪ್ರಾಣೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಜೆಡಿಎಸ್ ಎಂಎಲ್‍ಸಿ ಎಸ್.ಎಲ್. ಬೋಜೇಗೌಡ ಹಾಗೂ ಶೃಂಗೇರಿಯ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಶಾಸಕ ಟಿ.ಡಿ. ರಾಜೇಗೌಡ ಅವರು ಕಳೆದ ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಹೋಗಿ ಬಂದಿದ್ದರು. ಹೀಗಾಗಿ ಶಾಸಕರು ಸೇರಿದಂತೆ ಅವರ ಕುಟುಂಬದ 13 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 12 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಶಾಸಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇದರಿಂದ ಜಿಲ್ಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.










