ಬೆಂಗಳೂರು : ಕಾಂಗ್ರೆಸ್‍ನ ಹಿರಿಯ ಮುಖಂಡ, ಮಾಜಿ ಸಚಿವ ಡಾ. ವೈ. ನಾಗಪ್ಪ(75) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಾ. ವೈ ನಾಗಪ್ಪ ಅವರು ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರಿಹರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಇವರು ಧರಂಸಿಂಗ್ ಅವರ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.
ಇವರ ನಿಧನಕ್ಕೆ ಕಾಂಗ್ರೆಸ್ ಹಿರಿಯ ನಾಯಕರು ಸಂತಾಪ ಸೂಚಿಸಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿ ಮಾಜಿ ಸಚಿವ ಡಾ.ವೈ.ನಾಗಪ್ಪ ಅವರ ನಿಧನದ ಸುದ್ದಿ ಕೇಳಿ ದು:ಖವಾಯಿತು. 80-90ರ ದಶಕದಲ್ಲಿ ರಾಜಕಾರಣದಲ್ಲಿ ಸಕ್ರಿಯರಾಗಿದ್ದ ಡಾ.ನಾಗಪ್ಪ ಸದಾ ಬಡವರು ಮತ್ತು ಶೋಷಿತರ ಪರವಾಗಿದ್ದವರು. ಅವರ ಕುಟುಂಬ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮೂಳಕ ಸಂತಾಪ ಸೂಚಿಸಿದ್ದು, ಕಾಂಗ್ರೆಸ್ನ ಹಿರಿಯ ಮುಖಂಡ, ಮಾಜಿ ಸಚಿವರಾದ ಡಾ! ವೈ.ನಾಗಪ್ಪ ವಿಧಿವಶರಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಹರಿಹರ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ವೈ.ನಾಗಪ್ಪ, ಧರ್ಮಸಿಂಗ್ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಸೇವೆ ಸಲ್ಲಿಸಿದರು. ನಾಗಪ್ಪ ಅವರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.










