ಐಎಂಎ ವಂಚನೆ ಪ್ರಕರಣ-ರೋಷನ್ ಬೇಗ್ ಅವರ ನಿವಾಸದ ಮೇಲೆ ಸಿಬಿಐ ದಾಳಿ…

173

ಬೆಂಗಳೂರು : ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೊಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದು, ಇದೀಗ ಇಂದು ಬೆಳಿಗ್ಗೆ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ರೋಷನ್ ಬೇಗ್ ಅವರು ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್ ಅವರಿಂದ ಸುಮಾರು 200 ಕೋಟಿ ರೂ ಪಡೆದಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದು, ಈ ಹಿನ್ನೆಲೆ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರಿಗೆ ಎರಡು ಬಾರಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿ ವಿಚಾರಣೆ ನಡಿಸಿದ್ದರು. ಬಳಿಕ ಸಿಬಿಐ ಅಧಿಕಾರಿಗಳು ಮನ್ಸೂರ್ ಖಾನ್ ಅವರನ್ನು ವಿಚಾರಣೆ ನಡೆಸಿದಾಗ ನಾನು ರೋಷನ್ ಬೇಗ್ ಅವರಿಗೆ ಹಣವನ್ನು ನೀಡಿದ್ದೇನೆ. ಆ ಹಣವನ್ನು ಅವರಿಂದ ಪಡೆಯಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ರೋಷನ್ ಬೇಗ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದು, ಸಿಬಿಐ ಅಧಿಕಾರಿಗಳು ರೋಷನ್ ಬೇಗ್ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ರವಾನಿಸಿದ್ದಾರೆ. ರೋಷನ್ ಬೇಗ್ ಅವರು ಜೈಲು ಸೇರುತ್ತಿದ್ದಂತೆ ಇಂದು ಬೆಳಗ್ಗೆ 7 ಮಂದಿ ಸಿಬಿಐ ಅಧಿಕಾರಿಗಳ ತಂಡ ರೋಷನ್ ಬೇಗ್ ಅವರ ನಿವಾಸದ ಮೇಲೆ ದಾಳಿ ಮಾಡಿ ದಾಖಲಾತಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.