ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಇಂದು ಕೋವಿಡ್ ಸೋಂಕು ತಗಲಿದ್ದು, ಆದರೆ ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆಗೆ ಸೇರಲು ಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಕುಮಾರಸ್ವಾಮಿ ಅವರಿಗೆ ನಿನ್ನೆ ಸಂಜೆಯೇ ದಣಿವು ಕಾಣಿಸಿಕೊಂಡಿದೆ. ಹೀಗಾಗಿ ಬೆಂಗಳೂರಿಗೆ ಮರಳಿ, ಮನೆಗೆ ಹೋಗದೆ ಹೋಟೆಲ್ ಒಂದರಲ್ಲಿ ಉಳಿದುಕೊಂಡಿದ್ದರು. ಇಂದು ಬೆಳಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೊರೊನಾ ಪಾಸಿಟಿವ್ ಇರುವುದು ಧೃಢಪಟ್ಟಿದೆ. ಬಳಿಕ ವೈದ್ಯರು ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಎಂದು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ. ಹೀಗಾಗಿ ಮಣಿಪಾಲ್ ಆಸ್ಪತ್ರೆಗೆ ಹೋಗಲು ನಿರ್ಧರಿಸಿದ ಅವರು ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಪ್ರಯತ್ನಿಸಿದರೂ ಬೆಡ್ ಸಿಕ್ಕಿಲ್ಲ. ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಯನ್ನು ಸಂಪರ್ಕಿಸಿದಾಗ ಅಲ್ಲಿ ಬೆಡ್ ಸಿಕ್ಕಿದೆ ಎನ್ನಲಾಗಿದೆ.










