ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ ನಿಂತಿರುವುದು ಕಾಂಗ್ರೆಸ್ : ಹೆಚ್ ಡಿಕೆ.

210
firstsuddi

ಬೆಂಗಳೂರು: ಸರಣಿ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ಆಕ್ರೋಶ ಹೊರ ಹಾಕಿರುವ ಹೆಚ್.ಡಿ.ಕುಮಾರಸ್ವಾಮಿ ಅವರು, ಶಾಂತಿ ಕಾಲದಲ್ಲಿ ಕಲಹಕ್ಕೆ ಬರುವುದು, ನೆರೆ ಮನೆ ಬೆಂಕಿಯಲ್ಲಿ ಬೇಳೆ ಬೇಯಿಸುವುದು ಕಾಂಗ್ರೆಸ್ ನ ಜಾಡ್ಯ. ಈ ಅಂಟುರೋಗಕ್ಕೆ ಒಳಗಾದವರು ಸಿದ್ದರಾಮಯ್ಯ. ಲಸಿಕೆ ವಿಚಾರದಲ್ಲಿ ಕಾಂಗ್ರೆಸ್ ನ ಆತ್ಮವಂಚನೆ ನೆನಪಿಸಿದ್ದಕ್ಕೆ ಸಿದ್ದರಾಮಯ್ಯ ನನ್ನ ವಿರುದ್ಧ ಕಾಲು ಕೆರೆದುಕೊಂಡು ಬಂದಿದ್ದಾರೆ. ಅವರ ಪ್ರತಿ ಎಸೆತಕ್ಕೆ ಸಿಕ್ಸರ್ ಕೊಡಬೇಕೆನಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಕೋವಿಡ್ ಲಸಿಕೆ ವಿಚಾರದಲ್ಲಿನ ಕಾಂಗ್ರೆಸ್ಸಿನ ಆತ್ಮವಂಚನೆಯನ್ನು ಪ್ರಸ್ತಾಪಿಸಿದ್ದಕ್ಕೆ ನಾನು ಸ್ವಯಂ ಗೋಲು ಹೊಡೆದುಕೊಂಡಿರುವುದಾಗಿ ನೀವು ಹೇಳಿದ್ದೀರಿ. ಸಿದ್ದರಾಮಯ್ಯನವರೇ ಲಸಿಕೆ ವಿಚಾರದಲ್ಲಿ ರಾಷ್ಟ್ರದ ಎದುರು ಬೆತ್ತಲಾಗಿ, ನಿಂತಿರುವುದು ಕಾಂಗ್ರೆಸ್. ಈ ವಿಚಾರದಲ್ಲಿ ನನ್ನನ್ನು ಟೀಕಿಸಲು ಬಂದು ನೀವು ಹಿಟ್ ವಿಕೆಟ್ ಆಗಿದ್ದೀರಿ. ಲಸಿಕೆ ವಿಚಾರವಾಗಿ ಕಾಂಗ್ರೆಸ್ ಅನುಮಾನದ ಮಾತುಗಳನ್ನು ಆಡಲಿಲ್ಲವೇ? ಭಾರತದ್ದೇ ಕೋವ್ಯಾಕ್ಸಿನ್ನ ಬಗ್ಗೆ ಅಪಪ್ರಚಾರ ಮಾಡಲಿಲ್ಲವೇ? ನಮ್ಮದೇ ಲಸಿಕೆಯನ್ನು ನೀವು ಪ್ರೋತ್ಸಾಹಿಸಬೇಕಿತ್ತೋ ಇಲ್ಲವೋ? ಅದು ಬಿಟ್ಟು ನೀವು ಮಾಡಿದ್ದೇನು? ಅಡಿಗಡಿಗೆ ಲಸಿಕೆ ಮೇಲೆ ಅನುಮಾನ. ಈ ಮೂಲಕ ಭಾರತೀಯ ವಿಜ್ಞಾನಿಗಳ ಅಪಮಾನ. ಇದನ್ನೇ ಅಲ್ಲವೇ ನಾನು ಹೇಳಿದ್ದು? ಎಂದು ಪ್ರಶ್ನಿಸಿದರು.

ದೇಶದಲ್ಲಿ ಸರ್ವರಿಗೂ ಉಚಿತ ಲಸಿಕೆ ಹಾಕುವಂತೆ ಸೋನಿಯಾ ಗಾಂಧಿ ಅವರ ಜೊತೆಗೂಡಿ ಎಚ್.ಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯನವರೇ, ದೇಶದ ಹಲವು ವಿರೋಧಪಕ್ಷಗಳ ನಾಯಕರ ಜೊತೆಗೂಡಿ ದೇವೇಗೌಡರು ಪ್ರಧಾನಿಗೆ ಪತ್ರ ಬರೆದರೇ ಹೊರತು, ಸೋನಿಯಾ ಗಾಂಧಿ ಅವರ ಜೊತೆಗೂಡಿ ಪತ್ರ ಬರೆಯಲಿಲ್ಲ ನೆನಪಿರಲಿ. ಅಷ್ಟಕ್ಕೂ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರಕ್ಕೆ ಸಹಿ ಮಾಡುವಂತೆ ದೇವೇಗೌಡರಿಗೆ ಯಾರೆಲ್ಲ ವಿನಂತಿಸಿದ್ದರು, ಎಷ್ಟು ಬೇಡಾಡಿದರು ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿದೆಯೇ? ದೆಹಲಿಗೆ ಹೋಗಿ ಈ ವಿಚಾರವಾಗಿ ಸಿದ್ದರಾಮಯ್ಯನವರು ಮಾಹಿತಿ ಪಡೆದು ಬರಲಿ. ಮಾಹಿತಿ ಇಲ್ಲದೇ ಮಾತಾಡುವುದು ಸಿದ್ದರಾಮಯ್ಯನವರಿಗಿರುವ ದೊಡ್ಡ ಸಮಸ್ಯೆ ಎಂದರು.

ಲಸಿಕೆಗಾಗಿ 100 ಕೋಟಿ ಕೊಟ್ಟಿದ್ದಾಗಿ ಕಾಂಗ್ರೆಸ್ ಹೇಳುತ್ತಿದೆ. ಇದೇನು ಸಿದ್ದರಾಮಯ್ಯನವರ ಮನೆ ಗಂಟೇ? ಕಾಂಗ್ರೆಸ್ ಜನಪ್ರತಿನಿಧಿಗಳ ಕ್ಷೇತ್ರಾಭಿವೃದ್ಧಿ ನಿಧಿಯಲ್ಲವೇ? ಕ್ಷೇತ್ರಾಭಿವೃದ್ಧಿ ನಿಧಿಯನ್ನು ಸರ್ಕಾರಕ್ಕೇ ನೀಡಿರುವುದಾಗಿ ಹೇಳಬೇಕಿದ್ದ ಕಾಂಗ್ರೆಸ್, ಲಸಿಕೆಗಾಗಿ ಕೈಯಿಂದ 100 ಕೋಟಿ ಕೊಟ್ಟಂತೆ ಹೇಳಿದೆ. ಎಂಥ ವಂಚಕ ನಡೆ? ಎಂದು ಪ್ರಶ್ನಿಸಿದ್ದಾರೆ.

ನಾನು ದೇವೇಗೌಡರ ಸಲಹೆ ಪಡೆದುಕೊಳ್ಳುವುದು ಒಳ್ಳೆಯದು ಎಂದು ನೀವು ಹೇಳಿದ್ದೀರಿ. ದೇವೇಗೌಡರ ಸಲಹೆಯಂತೇ ನಾನು ಸೇರಿದಂತೆ ಪಕ್ಷ ನಡೆಯುತ್ತೇವೆ. ಅದನ್ನು ಹೇಳುತ್ತಿರುವ ತಾವು ಗೌಡರ ಸಲಹೆಯಂತೆ ನಡೆದುಕೊಂಡಿದ್ದೀರೇ ಸಿದ್ದರಾಮಯ್ಯನವರೇ ಹೇಳಲು ಬಹಳಷ್ಟಿದೆ. ನಾನು ಸುಳ್ಳಾಡಲಾರೆ. ಅದು ನಿಮಗೆ ಹೇಗೆ ಕಾಣುತ್ತದೆ ಎಂಬುದು ನನಗೆ ಅಪ್ರಸ್ತುತ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಅಸಮರ್ಪಕ ಲಸಿಕೆ ಅಭಿಯಾನ ವಿರುದ್ಧ ನಮ್ಮದೂ ಆಕ್ಷೇಪಣೆಗಳಿವೆ. ಆದರೆ ಲಸಿಕೆ ವಿರುದ್ಧ ನಮ್ಮ ನಿಲುವು ಇಲ್ಲ. ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯಬೇಕೆಂದು ಒತ್ತಾಯಿಸಿ ನಾನು ಸರ್ಕಾರಗಳಿಗೆ ಹಲವು ಸಲಹೆ ನೀಡಿದ್ದೇನೆ. ಆದರೆ, ಕಾಂಗ್ರೆಸ್ ಲಸಿಕೆ ವಿರುದ್ಧವೇ ಮಾತಾಡಿತು. ಈಗ ಲಸಿಕೆ, ಲಸಿಕೆ ಎನ್ನುತ್ತಿದೆ. ಇದು ಕಾಂಗ್ರೆಸ್ಸಿನ ಇಬ್ಬಗೆ ನೀತಿ ಎಂದು ವಾಗ್ದಾಳಿ ನಡೆಸಿದರು.