ಕರ್ನಾಟಕ, ಕೇರಳ ಸಾರಿಗೆಯಲ್ಲಿ ಪೈಪೋಟಿ ಇಲ್ಲ, ವಿವಾದ ಅನಗತ್ಯ : ಲಕ್ಷ್ಮಣ ಸವದಿ.

107
Firstsuddi

ಬೆಂಗಳೂರು : ಕರ್ನಾಟಕ ಬಳಸುತ್ತಿದ್ದ ಕೆಎಸ್ ಆರ್ ಟಿಸಿ ಟ್ರೇಡ್ ಮಾರ್ಕ್ ಕೇರಳದ ಪಾಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು, ಕೇರಳವು ಕೆಎಸ್ ಆರ್ ಟಿಸಿ ಎಂಬ ಶಬ್ದವನ್ನು ತಾವೇ ಮೊದಲು ಬಳಸಿದ್ದರಿಂದ ಕರ್ನಾಟಕವು ಈ ಶಬ್ದವನ್ನು ಬಳಸಬಾರದು ಎಂದು ತಕರಾರು ತೆಗೆದ ಬಗ್ಗೆ ಈಗ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯು ತೀರ್ಪು ನೀಡಿದೆ ಎಂದು ಮಾಹಿತಿ ಬಂದಿದೆ. ಆದರೆ ಈ ತೀರ್ಪಿನಲ್ಲಿ ಏನಿದೆ ಎಂಬ ಅಂಶವು ನಮಗೆ ಅಧಿಕೃತವಾಗಿ ಇನ್ನೂ ಬಂದಿಲ್ಲ, ಅದು ಲಭ್ಯವಾದ ನಂತರ ಕರ್ನಾಟಕ ರಾಜ್ಯದ ಮುಂದಿನ ನಿಲುವು ಮತ್ತು ಕಾನೂನು ಹೋರಾಟ ಏನು ಎಂಬುದರ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ನಮ್ಮದು ಒಕ್ಕೂಟ ವ್ಯವಸ್ಥೆ ಎಂದರೆ ಫೆಡರಲ್ ಸಿಸ್ಟಮ್. ಒಂದು ರಾಜ್ಯವು ಮತ್ತೊಂದು ರಾಜ್ಯದ ಜೊತೆಗೆ ಯಾವುದೇ ಸಂಘರ್ಷವಿಲ್ಲದೆ ಸೌಹಾರ್ದಯುತವಾಗಿ ಸಂಬಂಧವನ್ನು ಇಟ್ಟುಕೊಂಡು ಹೋಗಬೇಕೆಂದು ಈ ಫೆಡರಲ್ ಸಿಸ್ಟಮ್ ಹೇಳುತ್ತದೆ. ಆದರೆ ದುರದೃಷ್ಟವಶಾತ್ ಈ ವಿವಾದ ಅನಗತ್ಯವಾಗಿ ಎದ್ದಿದೆ. ಏಕೆಂದರೆ ಖಾಸಗಿ ಸಂಸ್ಥೆಗಳಲ್ಲಾದರೆ ಈ ರೀತಿಯ ಹೆಸರು ಅಥವಾ ಟ್ರೇಡ್ಮಾರ್ಕ್ ಗಳಿಂದ ಅವರ ವ್ಯವಹಾರ ಮತ್ತು ಲಾಭಗಳ ಮೇಲೆ ಪ್ರಭಾವ ಬೀಳುತ್ತದೆ. ಆದರೆ ಸರ್ಕಾರಿ ಸಂಸ್ಥೆಗಳು ಹಾಗಲ್ಲ. ಇಲ್ಲಿ ಜನರ ಸೇವೆಯ ಮುಖ್ಯ. ಕರ್ನಾಟಕವಾಗಲಿ, ಕೇರಳವಾಗಲಿ ಪರಸ್ಪರ ಸಾರಿಗೆ ಕ್ಷೇತ್ರದಲ್ಲಿ ಲಾಭಗಳಿಸುವ ಮೇಲಾಟಕ್ಕೆ ಅಥವಾ ಸ್ಪರ್ಧೆಗೆ ಮುಂದಾಗದೆ ಸಾರ್ವಜನಿಕರ ಹಿತಾಸಕ್ತಿ ಮತ್ತು ಸೇವೆಯನ್ನು ಗಮನದಲ್ಲಿಟ್ಟುಕೊಂಡು ಕೆಲಸ ಮಾಡುತ್ತಿವೆ. ಹೀಗಾಗಿ ಈ ವಿಷಯವನ್ನು ಯಾವುದೇ ರಾಜ್ಯಗಳು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಿಕೊಳ್ಳಬಾರದು ಎಂದು ಅಭಿಪ್ರಾಯಪಟ್ಟದ್ದಾರೆ.

ಇದು ಕೇರಳಕ್ಕೇನು ಸಂಭ್ರಮಪಡುವಂತಹ ವಿಚಾರವೇನಲ್ಲ. ಕರ್ನಾಟಕದಲ್ಲಿ ಕೆಎಸ್ ಆರ್ ಟಿಸಿ ಎಂಬ ಹೆಸರಿದ್ದರೆ, ಅದರಿಂದ ಕೇರಳ ರಾಜ್ಯದ ಕೆಎಸ್ ಆರ್ ಟಿಸಿ ಸಂಸ್ಥೆಗೆ ಯಾವುದೇ ನಷ್ಟವೇನಿಲ್ಲ. ಕರ್ನಾಟಕ, ಕೇರಳ ಸಾರಿಗೆಯಲ್ಲಿ ಪೈಪೋಟಿ ಇಲ್ಲ ಎಂಬುದನ್ನು ಕೇರಳ ಮೊದಲು ಅರ್ಥಮಾಡಿಕೊಳ್ಳಬೇಕು. ಇಂತಹ ವಿಷಯಗಳಲ್ಲಿ ಅನಗತ್ಯವಾಗಿ ವಿವಾದಗಳನ್ನು ಹೆಚ್ಚು ಮಾಡುತ್ತಾ ಪರಸ್ಪರ ರಾಜ್ಯಗಳಲ್ಲಿ ವಿವಾದಗಳನ್ನು ಬೆಳೆಸುವ ಪರಿಪಾಠಕ್ಕೆ ನಾವೆಲ್ಲರೂ ಅಂತ್ಯ ಹಾಡಬೇಕು. ದೇಶದ ಹಿತದೃಷ್ಟಿಯಿಂದ ರಾಜ್ಯ ರಾಜ್ಯಗಳ ನಡುವಿನ ಬಾಂಧವ್ಯವನ್ನು ಉತ್ತಮವಾಗಿ ಇಟ್ಟುಕೊಳ್ಳುವುದು ಬಹಳ ಮುಖ್ಯವಾದ ವಿಷಯ ಎಂದು ಲಕ್ಷ್ಮಣ ಸವದಿ ಅವರು ಹೇಳಿದ್ದಾರೆ.