ಈಜುಕೊಳ ನಿರ್ಮಾಣ ; ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆ…

102
firstsuddi

ಮೈಸೂರು : ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರು ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳವನ್ನು ಕಟ್ಟಿಸಿದ್ದರು. ಬಳಿಕ ಈ ವಿಷಯ ಚರ್ಚೆಗೆ ಗ್ರಾಸವಾಗಿತ್ತು.ಅಲ್ಲದೇ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿ ಇಲ್ಲದೆ ಕಟ್ಟಡ ನವೀಕರಿಸಿ ನಿವಾಸದ ನೆಲ ಹಾಸಿಗೆಯ ನವೀಕರಣ ಮಾಡಲಾಗಿದೆ ಎಂದು ಶಾಸಕ ಸಾ.ರಾ ಮಹೇಶ್ ಅವರು ದೂರು ನೀಡಿದ್ದರು. ಈ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ವಿಚಾರಣೆಗೆ ನಿರ್ದೇಶಿಸಿತ್ತು. ಇದೀಗ ವಿಚಾರಣೆ ನಡೆಸಿದ ಪ್ರಾದೇಶಿಕ ಆಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ವರದಿಯಲ್ಲಿರುವ ಅಂಶಗಳು ಈ ಕೆಳಗಿನಂತಿವೆ :
1. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ.ಗಳ ಅಂದಾಜು ಪಟ್ಟಿಯನ್ನು ತಯಾರಿಸಿದ್ದು, ಈ ಅಂದಾಜುಪಟ್ಟಿಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.
2. ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ.
3. ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಇಲ್ಲ.
4. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.
5. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಸಹ ಇಲ್ಲ.
6. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದರಿಂದ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ.
7. ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.