ಬೆಂಗಳೂರು : ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಲ್ಲಿ ನಾಳೆಯಿಂದ ಭಕ್ತರು ಪೂಜೆ ಹಾಗೂ ಸೇವೆ ಸಲ್ಲಿಸುವುದಕ್ಕೆ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ಕೋವಿಡ್ ಲಾಕ್ ಡೌನ್ ಜಾರಿಯಾದ ಬಳಿಕ ಧಾರ್ಮಿಕ ಸ್ಥಳಗಳಿಗೆ ಭಕ್ತರ ಪ್ರವೇಶ ನಿಷೇಧಿಸಲಾಗಿತ್ತು. ದರ್ಶನಕ್ಕೆ ಸೀಮಿತಗೊಳಿಸಿ ಜುಲೈ ಮೊದಲ ವಾರ ಆದೇಶ ಹೊರಡಿಸಲಾಗಿತ್ತು. ಆದರೆ, ಯಾವುದೇ ರೀತಿಯ ಪೂಜೆ ಅಥವಾ ಸೇವೆ ಸಲ್ಲಿಸಲು ಅವಕಾಶ ಇರಲಿಲ್ಲ.
ಇದೀಗ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ನಾಳೆಯಿಂದ ಧಾರ್ಮಿ ಸ್ಥಳಗಳಲ್ಲಿ ಸೇವೆಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಜಾತ್ರೆ, ದೇವಸ್ಥಾನದ ಹಬ್ಬಗಳು, ಮೆರವಣಿಗೆ ಮತ್ತು ಸಮಾವೇಶಗಳಿಗೆ ಅನುಮತಿ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ರಾಜ್ಯದಾದ್ಯಂತ ಮನರಂಜನಾ ಪಾರ್ಕ್ ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ. ಆದರೆ, ಜಲ ಕ್ರೀಡೆಗೆ ಸಂಬಂಧಿಸಿದ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ.










