ನವದೆಹಲಿ : ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂಕೋರ್ಟ್ ಇಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಜಾಮೀನು ಕೋರಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, ಧಾರವಾಡಕ್ಕೆ ತೆರಳದಂತೆ ಸೂಚನೆ ನೀಡಿದೆ. ಒಂದು ವೇಳೆ ಸಾಕ್ಷಿ ಅಳಿಸಿ ಹಾಕಲು ಯತ್ನಿಸಿದರೆ ಜಾಮೀನು ಅರ್ಜಿಯನ್ನು ರದ್ದು ಮಾಡುವುದಾಗಿ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
2016ರ ಜೂನ್ 15ರಂದು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ಬಿಜೆಪಿ ನಾಯಕರಾಗಿದ್ದ ಯೋಗೇಶ್ ಗೌಡ ಅವರನ್ನು ಸಪ್ತಾಪುರದಲ್ಲಿ ಹತ್ಯೆ ಮಾಡಲಾಗಿತ್ತು. ಬಳಿಕ 2020ರ ನವೆಂಬರ್ 5ರಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು.










