ಶಾಲೆಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸಿರುವ ಮಕ್ಕಳನ್ನೂ ದಾಖಲು ಮಾಡಿಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ…

85
firstsuddi

ಚಿಕ್ಕಮಗಳೂರು : ಜಿಲ್ಲೆಯಲ್ಲಿರುವ ಮೊರಾರ್ಜಿ ದೇಸಾಯಿ ಮತ್ತು ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಸಿರುವ ಎಲ್ಲಾ ಮಕ್ಕಳನ್ನೂ ದಾಖಲು ಮಾಡಿಕೊಳ್ಳುವಂತೆ ಬಹುಜನ ಸಮಾಜ ಪಕ್ಷ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.

ಅಪರ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರನ್ನು ಇಂದು ಭೇಟಿ ಮಾಡಿದ ಪಕ್ಷದ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷದಿಂದ ಬಡವರು ಮತ್ತು ಗ್ರಾಮಾಂತರ ಪ್ರದೇಶಗಳ ಮಕ್ಕಳ ಶಿಕ್ಷಣ ವ್ಯವಸ್ಥೆ ಹಾಳಾಗಿದ್ದು ಆ ವಿದ್ಯಾರ್ಥಿಗಳ ಕಲಿಕಾ ಮಟ್ಟ ಕುಸಿದಿದೆ. ಲಾಕ್‍ಡೌನ್‍ನಿಂದಾಗಿ ಆರ್ಥಿಕವಾಗಿ ಜರ್ಜರಿತರಾಗಿರುವ ಬಡ ಪೋಷಕರು ತಮ್ಮ ಮಕ್ಕಳಿಗೆ ಸಾಕಷ್ಟು ಹಣ ಸುರಿದು ವಿದ್ಯಾಭ್ಯಾಸ ಮಾಡಿಸುವ ಶಕ್ತಿ ಕಳೆದುಕೊಂಡಿದ್ದಾರೆ ಎಂದು ವಿಷಾಧಿಸಿದರು.

ಈ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಮತ್ತು ಡಾ|| ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ ಬಡ ಪೋಷಕರು ತಮ್ಮ ಮಕ್ಕಳಿಗೆ ಪ್ರವೇಶಾತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆ ಶಾಲೆಗಳಲ್ಲಿ ಪ್ರವೇಶಾತಿ ಸಿಗದಿದ್ದರೆ ಬಡ ಮಕ್ಕಳ ಭವಿಷ್ಯ ಹಾಳಾಗುತ್ತದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅನೇಕ ವಿದ್ಯಾರ್ಥಿಗಳು ತಮ್ಮ ಓದಿಗೆ ಅನಿವಾರ್ಯವಾಗಿ ತಿಲಾಂಜಲಿ ಇಡಬೇಕಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಡಳಿತ ಇದನ್ನು ಅರಿತು ಮೊರಾರ್ಜಿ ದೇಸಾಯಿ ಮತ್ತು ಅಂಬೇಡ್ಕರ್ ವಸತಿ ಶಾಲೆಗಳಿಗೆ ಪ್ರವೇಶಾತಿ ಬಯಸಿರುವ ಎಲ್ಲಾ ಮಕ್ಕಳನ್ನೂ ದಾಖಲು ಮಾಡಿಕೊಂಡು ಅವರ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಬಿಎಸ್.ಪಿ ಜಿಲ್ಲಾಧ್ಯಕ್ಷ ಕೆ.ಟಿ.ರಾಧಾಕೃಷ್ಣ, ಕಛೇರಿ ಕಾರ್ಯದರ್ಶಿ ಕೆ.ಆರ್.ಗಂಗಾಧರ್, ತಾಲ್ಲೂಕು ಅಧ್ಯಕ್ಷ ಹರೀಶ್ ಮಿತ್ರ, ಜಿಲ್ಲಾ ಸಹೋದರತ್ವ ಸಮಿತಿಯ ಅಧ್ಯಕ್ಷೆ ಕೆ.ಬಿ.ಸುಧ, ಕೆ.ಎಸ್. ಮಂಜುಳ, ನವೀನ್, ಜೋಸೆಫ್, ಸೋಮಶೇಖರ್ ಹಾಜರಿದ್ದರು.