ಬೆಂಗಳೂರು : ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಸಮಯದಲ್ಲಿ ಯಾವುದೇ ರ‍್ಯಾಲಿ, ಪ್ರದರ್ಶನ, ಮೆರವಣಿಗೆ, ಪಾದಯಾತ್ರೆಗಳಿಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಖಡಕ್ ನಿರ್ದೇಶನ ನೀಡಿದೆ.
ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಾದಯಾತ್ರೆಯನ್ನು ಮುಂದುವರಿಸದಂತೆ ಕೆಪಿಸಿಸಿಯನ್ನು ನಿರ್ಬಂಧಿಸಬೇಕು. ಯಾವುದೇ ರಾಜಕೀಯ ಪಕ್ಷಗಳಿಗೆ ಮೆರವಣಿಗೆ, ಧರಣಿ ಹಾಗೂ ಪ್ರತಿಭಟನೆ ನಡೆಸಲು ಅನುಮತಿ ನೀಡಬಾರದು. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕೆಪಿಸಿಸಿ ಪರ ಹಾಜರಾದ ಹಿರಿಯ ವಕೀಲ ಉದಯ ಹೊಳ್ಳ ಅವರು, ಹೈಕೋರ್ಟ್ ಎಚ್ಚರಿಕೆಯ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ, ಇದೇ 4 ರಂದು ಹೊರಡಿಸಲಾಗಿರುವ ಎಸ್‌ಒಪಿಯನ್ನು ರಾಜ್ಯದಾದ್ಯಂತ ಕಠಿಣವಾಗಿ ಜಾರಿಗೆ ತನ್ನಿ ಎಂದು ಸರ್ಕಾರಕ್ಕೆ ನಿರ್ದೇಶಿಸಿ ಅರ್ಜಿ ವಿಲೇವಾರಿ ಮಾಡಿದೆ.










