ಕೂದಲು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಮಹಿಳೆಯ ಮೆರವಣಿಗೆ : ನಾಲ್ವರ ಬಂಧನ…

77
firstsuddi

ನವದೆಹಲಿ : ಜನರ ಗುಂಪೊಂದು ಮಹಿಳೆಯೊಬ್ಬರ ಕೂದಲು ಕತ್ತರಿಸಿ, ಮುಖಕ್ಕೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ ಮೆರವಣಿಗೆ ನಡೆಸಿರುವ ಆಘಾತಕಾರಿ ಘಟನೆಯೊಂದು ರಾಷ್ಟ್ರ ರಾಜಧಾನಿಯಲ್ಲಿ ನಡೆದಿದೆ.

ಪೂರ್ವ ದೆಹಲಿಯ ಶಹದಾರಾದಲ್ಲಿ ಬುಧವಾರ ಈ ಘಟನೆ ನಡೆದಿದೆ. ಅಷ್ಟೇ ಅಲ್ಲದೆ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದ್ದು, ಆರೋಪಿಗಳು ಶಹದಾರಾ ಪ್ರದೇಶದ ಅಕ್ರಮ ಮದ್ಯ ಮಾರಾಟಗಾರರು ಎನ್ನಲಾಗಿದೆ.

ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ. ಈಗಾಗಲೇ ನಾಲ್ವರು ಮಹಿಳೆಯರನ್ನು ಬಂಧಿಸಿದ್ದೇವೆ. ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಹೆಚ್ಚಿನ ತನಿಖೆ ನಡೆಸಲು ಅಧಿಕಾರಿಗಳ ತಂಡವೊಂದನ್ನ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಕೆಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಳೆದ ಕೆಲವು ವರ್ಷಗಳಿಂದ ಸಂತ್ರಸ್ತೆಯು ಶಹದಾರಾ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಮಹಿಳೆಗೆ ಮದುವೆಯಾಗಿ ಒಂದು ಮಗುವಿದೆ. ನೆರೆಹೊರೆಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯೊಂದಿಗೆ ಏಕಪಕ್ಷೀಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಆದರೆ ಮಹಿಳೆ, ಆತನನ್ನು ತಿರಸ್ಕರಿಸಿದ್ದ ಹಿನ್ನೆಲೆ ಕಳೆದ ಕೆಲ ದಿನಗಳ ಹಿಂದೆ ಆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದ ಎನ್ನಲಾಗಿದೆ. ಮಹಿಳೆಯ ಕಾರಣದಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಕುಟುಂಬದವರು ಈ ಹಿಂದೆ ಕೂಡ ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಈ ಕುರಿತಂತೆ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಇದು ನಾಚಿಗೇಡಿನ ಸಂಗತಿಯಾಗಿದೆ. ಈ ಘಟನೆ ಕುರಿತಂತೆ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಒತ್ತಾಯಿಸುತ್ತೇನೆ.  ದೆಹಲಿಯಲ್ಲಿ ಇಂತಹ ಘೋರ ಅಪರಾಧಗಳಿಗೆ ಮತ್ತು ಅಪರಾಧಿಗಳಿಗೆ ಯಾವುದೇ ಬೆಲೆ ನೀಡುವುದನ್ನು ಸಹಿಸಲಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.