ತುಮಕೂರು : ಬುದ್ಧಿಮಾಂದ್ಯ ಯುವತಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್ಐ ಮೇಲಿನ ಆರೋಪ ಸಾಬೀತಾಗಿದ್ದು, ಎಎಸ್ಐ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.
2017ರ ಜ.15ರಂದು ರಾತ್ರಿ ಪಾಳಿಯಲ್ಲಿದ್ದ ಮಹಿಳಾ ಠಾಣೆಯ ಎಎಸ್ಐ ಉಮೇಶಯ್ಯ ನಗರದ ಅಂತರಸನಹಳ್ಳಿ ಸೇತುವೆ ಬಳಿ ಬುದ್ಧಿಮಾಂಧ್ಯೆ ಮೇಲೆ ಅತ್ಯಾಚಾರ ಎಸಗಿದ್ದನು. ಸಂತ್ರಸ್ತೆಯ ಪೋಷಕರು ಎಎಸ್ಐ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಕರಣ ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿತ್ತು. ಸರ್ಕಾರಿ ಅಭಿಯೋಜಕಿ ಕವಿತಾ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಈ ಪ್ರಕರಣದ ವಿಚಾರಣೆಯಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಎರಡನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಹೆಚ್ಎಸ್ ಮಲ್ಲಿಕಾರ್ಜುನಸ್ವಾಮಿ ಅವರು ಉಮೇಶಯ್ಯ ತಪ್ಪಿತಸ್ಥ ಎಂದು ತೀರ್ಪು ನೀಡಿದ್ದಾರೆ. ಜನವರಿ 31ರಂದು ಉಮೇಶಯ್ಯನಿಗೆ ನ್ಯಾಯಾಲಯ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಿದೆ.










