ಚಿಕ್ಕಮಗಳೂರು : ಯುವಜನತೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ಮಾದಕ ವಸ್ತುಗಳಿಂದ ದೂರವಿರಬೇಕು ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಿಲ್ಲಾ ಸಂಚಾಲಕಿ ಬಿ.ಕೆ.ಭಾಗ್ಯ ಸಲಹೆ ಮಾಡಿದರು.
ಶ್ರೀ ಶಕ್ತಿ ಮದ್ಯವ್ಯಸನ ಮುಕ್ತಿ ಕೇಂದ್ರ ನಗರದ ಸೋಮೇಶ್ವರ ದೇವಾಲಯದ ಸಮುದಾಯ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಮದ್ಯ ಮತ್ತು ಮಾದಕ ವಸ್ತುಗಳ ನಿಯಂತ್ರಣ ಕುರಿತ ಜಾಗೃತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿ ದೆಸೆಯಲ್ಲಿ ಮತ್ತು ಯೌವನಾವಸ್ಥೆಯಲ್ಲಿ ಮದ್ಯ, ತಂಬಾಕು ಮತ್ತು ಮಾದಕ ವಸ್ತುಗಳು ಸೇರಿದಂತೆ ಬಹಳಷ್ಟು ಆಕರ್ಷಣೆಗಳಿರುತ್ತವೆ, ನಾವು ಅವುಗಳಿಗೆ ದಾಸರಾದರೆ ನಮ್ಮ ಬದುಕು ಪಾತಾಳಕ್ಕೆ ಬೀಳುತ್ತದೆ ನಮ್ಮ ವಿದ್ಯಾಭ್ಯಾಸ ಮೊಟಕುಗೊಳ್ಳುತ್ತದೆ, ಆರ್ಥಿಕ ಸಂಕಷ್ಟದಿಂದ ಕುಟುಂಬ ಬೀದಿ ಪಾಲಾಗುತ್ತದೆ ಎಂದು ಎಚ್ಚರಿಸಿದರು.
ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ ಮತ್ತು ದೈಹಿಕ ಆರೋಗ್ಯ ಹಾಳಾಗುತ್ತದೆ, ನಮ್ಮ ಕುಟುಂಬದ ಮಾನ-ಮರ್ಯಾದೆ ಮಣ್ಣುಪಾಲಾಗುತ್ತದೆ, ಸಮಾಜದ ನಮ್ಮನ್ನು ನಿಕೃಷ್ಟವಾಗಿ ಕಾಣುತ್ತದೆ ಎಂದು ಹೇಳಿದರು.
ನಮ್ಮ ಯುವ ಜನಾಂಗದ ಹಿತದೃಷ್ಠಿಯಿಂದ ಸರ್ಕಾರಗಳು ಮದ್ಯ ಮತ್ತು ಮಾದಕ ವಸ್ತುಗಳ ಮಾರಾಟ ಹಾಗೂ ಸಾಗಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಕಾನೂನನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬಿಹೆಚ್‍ಇಓ ಬೇಬಿ ಮಾತನಾಡಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ವಿವರಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಶಕ್ತಿ ಮದ್ಯವ್ಯಸನ ಮುಕ್ತಿ ಕೇಂದ್ರದ ವ್ಯವಸ್ಥಾಪಕ ಮಂಜುನಾಥ್ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಯೋಗ ಶಿಕ್ಷಕ ನವೀನ್ ಕುಮಾರ್, ಜಿ.ಎಸ್.ಉಮಾ, ಸಮಾಜ ಸೇವಕರ ಒಕ್ಕೂಟದ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಉಪನ್ಯಾಸ ನೀಡಿದರು.










