ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜೊತೆ ವ್ಯಾಪಾರೀಕರಣ ಮಾಡುವುದು ಬೇಡ : ಹೆಚ್​ಡಿಕೆ.

88
firstsuddi

ಬೆಂಗಳೂರು : ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಕ್ರೇನ್ ನಿಂದ ಭಾರತದ ವಿದ್ಯಾರ್ಥಿಗಳನ್ನು ಏರ್ ಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಶಿಕ್ಷಣವನ್ನು ಅರ್ಧದಲ್ಲೇ ಮೊಟಕುಗೊಳಿಸಿ ಬಂದಿರುವ ಆ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯವೇನು? ವಿದ್ಯಾರ್ಥಿಗಳು ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ.

ಕರ್ನಾಟಕದ 800 -1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ಗೆ ಕಳುಹಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ.

ಯುದ್ಧಭೂಮಿಯಿಂದ ಜೀವ ಉಳಿಸಿಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರ್ಕಾರದ ಕರ್ತವ್ಯ. ಕರ್ನಾಟಕದಲ್ಲಿ 50-60 ವೈದ್ಯಕೀಯ ಶಿಕ್ಷಣ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿ ಎಂದು ಒತ್ತಾಯಿಸಿದರು.

2,65,720 ಕೋಟಿ ರೂ.ಗಳಷ್ಟು ಗಾತ್ರದ ಬಜೆಟ್ನಲ್ಲಿ ರಾಜ್ಯಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರ್ಕಾರವೇ ನೀಡಬೇಕು. ನೀಟ್ ಮೂಲಕ ಶೇ 50 ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ? ಎರಡೂ ಸರ್ಕಾರಗಳು ಅಂತಃಕರಣದಿಂದ ಆಲೋಚಿಸಿ ಎನ್ನುವುದು ನನ್ನ ಅಭಿಪ್ರಾಯ. ವೈದ್ಯೋ ನಾರಾಯಣೋ ಹರಿಃ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ಕೇಂದ್ರ-ರಾಜ್ಯ ಸರ್ಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.