ಮೈಸೂರು : ಸಿದ್ದರಾಮನಹುಂಡಿಯಲ್ಲಿ ನೀಡಿದ ಹೇಳಿಕೆ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ಸರಣಿ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ನಮ್ಮ ತಾಯಂದಿರು ಸೇರಿದಂತೆ ಸಾಮಾನ್ಯವಾಗಿ ಎಲ್ಲರೂ ತಲೆ ಮೇಲೆ ಬಟ್ಟೆ ಹಾಕಿಕೊಳ್ಳುತ್ತಾರೆ ಎಂದು ಹೇಳಿದ್ದೆನೆಯೇ ಹೊರತು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ.
ಸರ್ವ ಜಾತಿಗಳ ಸ್ವಾಮೀಜಿಗಳ ಬಗ್ಗೆ ನನಗೆ ಗೌರವವಿದೆ, ದೀರ್ಘಕಾಲದಿಂದ ನನಗೆ ಅವರ ಜೊತೆ ಹಾರ್ದಿಕ ಸಂಬಂಧ ಇದೆ. ಯಾವ ಸ್ವಾಮೀಜಿಗಳ ಬಗ್ಗೆಯೂ, ಯಾವಾಗಲೂ ನಾನು ಅಗೌರವದಿಂದ ನಡೆದುಕೊಂಡಿಲ್ಲ ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ರಾಜಕೀಯ ವಿರೋಧಿಗಳು ದುರುದ್ದೇಶದಿಂದ ನನ್ನ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಕೆಲವು ಮಾಧ್ಯಮಗಳು ಕೂಡಾ ಸಾಥ್ ನೀಡಿರುವುದು ವಿಷಾದನೀಯ ಬೆಳವಣಿಗೆ. ನನ್ನ ಹೇಳಿಕೆಯನ್ನು ತಿರುಚಿರುವುದು ರಾಜ್ಯದ ಪ್ರಮುಖ ಮಠಗಳ ಹಿರಿಯ ಸ್ವಾಮೀಜಿಗಳಿಗೆ ಅರ್ಥವಾಗಿರುವ ಕಾರಣಕ್ಕಾಗಿಯೇ ಅವರು ಮೌನವಾಗಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತಾಪೂರ್ವಕ ನಮನಗಳು ಎಂದು ಟ್ವೀಟ್ ಮಾಡಿದ್ದಾರೆ.
ಸಿದ್ದರಾಮಯ್ಯ ಹೇಳಿದ್ದೇನು?
ಹಿಜಬ್ ವಿವಾದಕ್ಕೆ ಬಿಜೆಪಿಯೇ ಕಾರಣ. ಹಿಂದೂ ಹೆಣ್ಣು ಮಕ್ಕಳು ತಲೆಯ ಮೇಲೆ ಬಟ್ಟೆ ಹಾಕಿ ಕೊಳ್ಳಲ್ವಾ? ಹಾಗೆಯೇ ಮುಸ್ಲಿಂ ಹೆಣ್ಣು ಮಕ್ಕಳೂ ಒಂದು ದುಪ್ಪಟ್ಟ ಹಾಕಿಕೊಳ್ಳುತ್ತೇನೆ ಅಂದರೆ ಅದರಲ್ಲಿ ತಪ್ಪೇನಿದೆ. ಸ್ವಾಮೀಜಿಗಳು ಕೂಡ ತಲೆಯ ಮೇಲೆ ಬಟ್ಟೆ ಹಾಕುತ್ತಾರೆ. ಅದನ್ನು ನೀವು ಪ್ರಶ್ನೆ ಮಾಡುತ್ತೀರಾ? ಇಂತಹ ವಿವಾದಗಳನ್ನು ಸೃಷ್ಟಿಸಿ ಅದನ್ನು ಅರಗಿಸಿ ಕೊಳ್ಳುತ್ತೇವೆ ಎಂದು ಬಿಜೆಪಿ ಅಂದುಕೊಂಡಿದೆ. ಆದರೆ ಜನ ಬುದ್ದಿವಂತರು, ಜನರಿಗೆ ಬಿಜೆಪಿಯ ತಂತ್ರ ಅರ್ಥವಾಗಿದೆ ಎಂದು ಹೇಳಿದ್ದರು.










