ಉಡುಪಿ : ಪೊಲೀಸ್ ಕಾನ್ಸ್ಟೇಬಲ್ ರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯನ್ನು ರಾಜೇಶ್ ಕುಂದರ್ (42) ಎಂದು ಗುರುತಿಸಲಾಗಿದೆ. 2022 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಮೌಲ್ಯ ಮಾಪನ ಕೇಂದ್ರವಾಗಿದ್ದ ಆದಿ ಉಡುಪಿ ಶಾಲೆಯಲ್ಲಿ ರಾಜೇಶ್ ಕುಂದರ್ ಭದ್ರತೆಗೆ ನಿಯೋಜನೆಗೊಂಡಿದ್ದು, ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಬೆಳಗಿನ ಜಾವ ತಮ್ಮದೇ ಸರ್ವೀಸ್ ಬಂದೂಕ್ನಿಂದ ಗುಂಡು ಹಾರಿಸಿಕೊಂಡಿದ್ದಾರೆ.
ಒಂದು ತಿಂಗಳ ಹಿಂದೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಬ್ಬಂದಿ ನಡುವೆ ಹೊಡೆದಾಟ ನಡೆದಿದ್ದು, ರಾಜೇಶ್ ಕುಂದರ್ ಅವರನ್ನು ಅಮಾನತುಗೊಳಿಸಲಾಗಿತ್ತು. 2 ದಿನಗಳ ಹಿಂದೆ ಮತ್ತೆ ರಾಜೇಶ್ ಕುಂದರ್ ಕರ್ತವ್ಯಕ್ಕೆ ಹಾಜರಾಗಿದ್ದರು. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.










