ಬೆಂಗಳೂರು : ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪಕ್ಷಕ್ಕೆ ಇಂದು ರಾಜೀನಾಮೆ ನೀಡಿದ್ದು, ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಪ್ರಮೋದ್ ಮಧ್ವರಾಜ್ ಅವರು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಮತ್ತು ಕೆಪಿಸಿಸಿ ಉಪಾಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಡಿ.ಕೆ.ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಈ ಪತ್ರದ ಮೂಲಕ ಅವರು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಮತದಾರರಿಗೆ ಧನ್ಯವಾದವನ್ನು ಸಲ್ಲಿಸಿದ್ದಾರೆ.
ಕೋಲಾರ ಮತ್ತು ಮಂಡ್ಯದ ಪ್ರಮುಖ ನಾಯಕರು ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ. ವರ್ತೂರು ಪ್ರಕಾಶ್, ಮಾಜಿ ಶಾಸಕ ಮಂಜುನಾಥ್ ಗೌಡ, ಸಂದೇಶ್, ನಾಗರಾಜ್, ಜೆಡಿಎಸ್ ಟಿಕೆಟ್ ನಿರಾಶಿತೆ ನಿವೃತ್ತ ಐಆರ್ಎಸ್ ಅಧಿಕಾರಿ ಲಕ್ಷ್ಮೀ ಅಶ್ವಿನ್ ಗೌಡ, ಮಾಜಿ ಸಚಿವ ಜಯರಾಮ್ ಪುತ್ರ ಅಶೋಕ್ ಬಿಜೆಪಿಗೆ ಸೇರ್ಪಡೆ ಆದರು.
ಬೆಂಗಳೂರು ಖಾಸಗಿ ಹೋಟೆಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಆರ್.ಅಶೋಕ್, ಎಸ್ಟಿ ಸೋಮಶೇಖರ್, ಮುನಿರತ್ನ ಸೇರಿ ಸಂಪುಟದ ಹಲವು ಸಚಿವರು ವಿವಿಧ ಪಕ್ಷದ ನಾಯಕರನ್ನು ಬಿಜೆಪಿಗೆ ಬರಮಾಡಿಕೊಂಡರು.










