ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ದಿಢೀರ್ ಅಂತ ದೆಹಲಿಗೆ ಪ್ರಯಾಣ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ಮೇರೆಗೆ ಸಿಎಂ ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ.
ಮಳೆ ಹಾನಿ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ನಲ್ಲಿದ್ದ ಸಿಎಂ, ಪರಿಶೀಲನೆ ಮುಗಿಸಿ, ಮಧ್ಯಾಹ್ನವೇ ತಮ್ಮ ಆರ್ಟಿ ನಗರ ನಿವಾಸದಿಂದ ಏರ್ ಪೋರ್ಟ್ ಗೆ ತೆರಳಿದ್ದು, ಅಲ್ಲಿಂದ ದೆಹಲಿಗೆ ಪ್ರಯಾಣಿಸಿದ್ದಾರೆ. ಸಂಜೆ 5.30ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ. ಹೈಕಮಾಂಡ್ ನಾಯಕರ ಭೇಟಿಗೆ ಪ್ರಯತ್ನ ನಡೆಸುತ್ತಿರುವ ಹಿನ್ನೆಲೆ ವಾಪಸ್ ಬರುವಿಕೆಯ ಸಮಯವನ್ನು ಕಾಯ್ದಿರಿಸಿಕೊಂಡಿದ್ದಾರೆ.
ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ವಿಚಾರ ಅಂತಿಮ ಹಂತದಲ್ಲಿದೆ. ಯಾವಾಗ ಸರ್ಜರಿ ನಡೆಸಬೇಕು ಎನ್ನುವ ಕುರಿತು ಹೈಕಮಾಂಡ್ ನಾಯಕರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಮಾಲೋಚನೆ ನಡೆಸಲಿದ್ದಾರೆ. ಇನ್ನೊಂದೆಡೆ ವಿಧಾನ ಪರಿಷತ್ ಮತ್ತು ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಹೈಕಮಾಂಡ್ ನಾಯಕರ ಜೊತೆ ಸಿಎಂ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. ಈಗಾಗಲೇ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಶಿಫಾರಸು ಮಾಡಿ ಕಳುಹಿಸಿಕೊಡಲಾಗಿದೆ.










