ನವದೆಹಲಿ : ಜುಲೈ 24 ರಂದು ಹಾಲಿ ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವಧಿ ಮುಕ್ತಾಯಗೊಳ್ಳಲಿದ್ದು, ನೂತನ ರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಜುಲೈ 18ರಂದು ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಜುಲೈ 21ರಂದು ಮತಗಳ ಎಣಿಕೆ ಕಾರ್ಯ ನಡೆಯಲಿದೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಷ್ಟ್ರಪತಿ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಭಾಗಿಯಾಗಲಿದ್ದು, ಯಾವುದೇ ಪಕ್ಷ ತನ್ನ ಸಂಸದರು, ಶಾಸಕರಿಗೆ ವಿಪ್ ಜಾರಿ ಮಾಡುವಂತಿಲ್ಲ. ಸದಸ್ಯರು ತಮ್ಮಗೆ ಬೇಕಾದ ಅಭ್ಯರ್ಥಿಗೆ ಮತ ಚಲಾಯಿಸಬಹುದು ಎಂದು ತಿಳಿಸಿದ್ದಾರೆ.
ಜೂನ್ 15 ರಂದು ರಾಷ್ಟ್ರಪತಿ ಚುನಾವಣೆಗೆ ಅಧಿಸೂಚನೆ ಹೊರಡಿಸಲಿದ್ದು, ಜೂನ್ 29 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜೂನ್ 30 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಜುಲೈ 02 ರೊಳಗೆ ನಾಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಅಂತಿಮವಾಗಿ ಜುಲೈ 18 ರಂದು ಮತದಾನ ನಡೆಯಲಿದ್ದು, ಜುಲೈ 21 ಎಣಿಕೆ ನಡೆಯಲಿದೆ. ಜುಲೈ 25 ರಂದು ಹೊಸ ರಾಷ್ಟ್ರಪತಿಗಳು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದರು.










