ರಾಹುಲ್ ವಿಚಾರಣೆ ವಿರೋಧಿಸಿ ರಾಜಭವನಕ್ಕೆ ಮುತ್ತಿಗೆ ಯತ್ನ: ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ…

57
firstsuddi

ಬೆಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ವಿರೋಧಿಸಿ ರಾಜಭವನ ಮುತ್ತಿಗೆಗೆ ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದ ಕೆಪಿಸಿಸಿ ಕಚೇರಿಯಿಂದ ಕಾಂಗ್ರೆಸ್ ಭವನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕರನ್ನ ಇಂಡಿಯನ್ ಎಕ್ಸ್ ಪ್ರೆಸ್ ವೃತ್ತದ ಬಳಿ ಪೊಲೀಸರು ತಡೆದು, ವಶಕ್ಕೆ ಪಡೆದರು. ಪ್ರತಿಭಟನೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಸೇರಿದಂತೆ ಪ್ರಮುಖ ಮುಖಂಡರು ಉಪಸ್ಥಿತರಿದ್ದರು. ಈ ವೇಳೆ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಅನೇಕ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಪ್ರತಿಭಟನಾ ಮೆರವಣಿಗೆಗ ಆರಂಭಕ್ಕೂ ಮುನ್ನ ಡಿಕೆ.ಶಿವಕುಮಾರ್ ಅವರು ಮಾತನಾಡಿ, ಕಾರ್ಯಕರ್ತರು ಸಾಕಷ್ಟು ಸಂಖ್ಯೆಯಲ್ಲಿ ಆಗಮಿಸಿದ್ದೀರಿ, ಸಂಯಮ ಹಾಗೂ ಸೌಜನ್ಯದಿಂದ ನಡೆದುಕೊಳ್ಳಿ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬೇಡಿ ಎಂದು ಮನವಿ ಮಾಡಿಕೊಂಡರು.

ಸಿದ್ದರಾಮಯ್ಯ ಅವರು ಮಾತನಾಡಿ, ನಮ್ಮ ರಾಷ್ಟ್ರೀಯ ನಾಯಕರ ವಿರುದ್ಧ ಕೇಂದ್ರ ಸರ್ಕಾರ ನಡೆಸುತ್ತಿರುವ ಕಿರುಕುಳದ ವಿರುದ್ಧ ಎಲ್ಲಾ ರಾಜ್ಯಗಳಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮ ರಾಜ್ಯದಲ್ಲಿಯೂ ಕೆಪಿಸಿಸಿ ವತಿಯಿಂದ ಇಂದು ರಾಜಭವನ ಮುತ್ತಿಗೆ ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.