ಮಾಲೆ : ಮಾಲ್ಡೀವ್ಸ್ ನ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಯೋಗ ಕಾರ್ಯಕ್ರಮಕ್ಕೆ ದುಷ್ಕರ್ಮಿಗಳ ಗುಂಪೊಂದು ನುಗ್ಗಿ ಅಡ್ಡಿಪಡಿಸಿದೆ ಎಂದು ವರದಿಯಾಗಿದೆ.
ಎಂಟನೇ ಅಂತರಾಷ್ಟ್ರೀಯ ಯೋಗ ದಿನದ ಪ್ರಯುಕ್ತ ಮಾಲ್ಡೀವ್ಸ್ ನ ಯುವ, ಕ್ರೀಡೆ ಮತ್ತು ಸಮುದಾಯ ಸಬಲೀಕರಣ ಸಚಿವಾಲಯದ ಸಹಯೋಗದಲ್ಲಿ ಭಾರತೀಯ ರಾಯಭಾರ ಕಚೇರಿಯು ಗಲೋಲ್ಹು ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ ಅಲ್ಲಿಗೆ ಬಂದ ಗುಪೊಂದು ಯೋಗಾಭ್ಯಾಸಕ್ಕೆ ಅಡ್ಡಿ ಪಡಿಸಿದೆ.
ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ದುಷ್ಕರ್ಮಿಗಳು ಯೋಗ ದಿನಾಚರಣೆಯಲ್ಲಿ ಭಾಗಿಯಾದ ಪ್ರಜೆಗಳ ಮೇಲೆ ಹಲ್ಲೆ ಮಾಡಿದ್ದಾರೆ. ಕ್ರೀಡಾಂಗಣದಲ್ಲಿದ್ದ ಧ್ವಜಗಳನ್ನು ಕಿತ್ತುಹಾಕಿದ್ದಾರೆ. ಅಷ್ಟೇ ಅಲ್ಲದೇ, ಆಹಾರ ಮಳಿಗೆಗಳನ್ನು ನಾಶಪಡಿಸಿ ಅಟ್ಟಹಾಸ ಮೆರೆದಿದ್ದಾರೆ. ಕೂಡಲೇ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ವಿಕೋಪಕ್ಕೆ ತಿರುಗದಂತೆ ತಡೆದಿದ್ದಾರೆ ಎಂದು ತಿಳಿದು ಬಂದಿದೆ.
ಈ ಕುರಿತು ಮಾಲ್ಡೀವ್ಸ್ ಅಧ್ಯಕ್ಷ ಇಬ್ರಾಹಿಂ ಸೋಲಿಹ್ ಪ್ರತಿಕ್ರಿಯಿಸಿದ್ದು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಹಾಗೂ ಈ ಘಟನೆಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.










