ಬೆಂಗಳೂರು : ಭೂ ವ್ಯಾಜ್ಯಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಹಾಗೂ ಲಂಚ ಪಡೆದ ಆರೋಪ ಎದುರಿಸುತ್ತಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ.
ಭ್ರಷ್ಟಾಚಾರ ಪ್ರಕರಣದಲ್ಲಿ ಕೆಳಹಂತದ ಅಧಿಕಾರಿಗಳನ್ನ ಮಾತ್ರ ಎಸಿಬಿ ಮುಟ್ಟೋದು ಅಂತಾ ಹೈಕೋರ್ಟ್ ಛಾಟಿ ಬೀಸಿದ ಬಳಿಕ ನಿನ್ನೆ ಎಸಿಬಿ ತಂಡವು ಡಿಸಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈ ಬೆನ್ನಲ್ಲೇ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಮಂಜುನಾಥ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಳೆದ ಮೇ 21ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಉಪ ತಹಶೀಲ್ದಾರ್ ಮಹೇಶ್ ಎಂಬುವರು ಗುತ್ತಿಗೆ ನೌಕರ ಚೇತನ್ ಆಲಿಯಾಸ್ ಚಂದ್ರು ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆದು ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದರು. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಪಾತ್ರದ ಬಗ್ಗೆ ಆರೋಪ ಕೇಳಿಬಂದಿತ್ತು.
ಬೆಂಗಳೂರು ನಗರ ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿ ಮಾಡಿರುವ ಜೆ ಮಂಜುನಾಥ್ ಅವರನ್ನು ಮಕ್ಕಳ ಹಕ್ಕುಗಳ ಸಂರಕ್ಷಣೆ ಯೋಜನೆಯ ನಿರ್ದೇಶಕರ ಹುದ್ದೆಗೆ ವರ್ಗಾಯಿಸಿದೆ. ನೂತನ ಡಿಸಿಯಾಗಿ ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಂಗಪ್ಪ ಸಂಗಪ್ಪ ನೇಮಕಗೊಂಡಿದ್ದಾರೆ.










