ಭ್ರಷ್ಟಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಐಪಿಎಸ್, ಐಎಎಸ್ ಅಧಿಕಾರಿಗಳ ಅಮಾನತು…

64
firstsuddi

ಬೆಂಗಳೂರು : ಭ್ರಷ್ಟಾಚಾರದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಹಾಗೂ ಐಎಎಸ್ ಅಧಿಕಾರಿ ಜೆ.ಮಂಜುನಾಥ್ ಅವರನ್ನು ಸೇವೆಯಿಂದ ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದೇ ದಿನ ಭ್ರಷ್ಟಾಚಾರದ ಆರೋಪ ಮೇಲೆ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಬಂಧಿಸಲಾಗಿತ್ತು. ಇದೀಗ ಒಂದೇ ದಿನ ಇಬ್ಬರನ್ನು ಅಮಾನತು ಮಾಡಲಾಗಿದೆ.

ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣ ಸಂಬಂಧ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿತ್ತು. ಬಂಧನಕ್ಕೊಳಗಾಗಿರುವ ಅಮೃತ್ ಪೌಲ್ ಅವರನ್ನು ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ. ಇವರು ಪ್ರಸ್ತುತ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿದ್ದರು.

ಇನ್ನು ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ.ಮಂಜುನಾಥ್ ಅವರನ್ನು ಎಸಿಬಿ ಬಂಧಿಸಿದ್ದು, ಭಾರತೀಯ ಸಿವಿಲ್ ಸೇವೆ ನಿಯಮದ ಪ್ರಕಾರ, ಬಂಧನಕ್ಕೊಳಗಾಗಿರುವ ಮಂಜುನಾಥ್ ಅವರನ್ನು ಸರ್ಕಾರ ಸೇವೆಯಿಂದ ಅಮಾನತು ಮಾಡಿದೆ. ಇತ್ತೀಚೆಗೆ ಮಂಜುನಾಥ್ ಅವರನ್ನು ಸರ್ಕಾರ ಸಮಗ್ರ ಮಕ್ಕಳ ಸಂರಕ್ಷಣಾ ಯೋಜನೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಿತ್ತು.