ಕೇರಳದ ಪಯ್ಯನ್ನೂರಿನಲ್ಲಿರುವ ಆರ್‌ಎಸ್‍ಎಸ್ ಕಚೇರಿ ಮೇಲೆ ಬಾಂಬ್ ದಾಳಿ…

56
firstsuddi

ತಿರುವನಂತಪುರಂ : ಇಂದು ಮುಂಜಾನೆ ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‍ಎಸ್) ಕಚೇರಿಯ ಮೇಲೆ ಬಾಂಬ್ ದಾಳಿ ನಡೆದಿದೆ. ದಾಳಿ ವೇಳೆ ಕಟ್ಟಡದ ಕಿಟಕಿ ಗಾಜುಗಳು ಒಡೆದು ಹೋಗಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಮಧ್ಯರಾತ್ರಿ 1.30 ರ ಸುಮಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಪಯ್ಯನ್ನೂರಿನಲ್ಲಿರುವ ರಾಷ್ಟ್ರ ಭವನ ಎಂಬ ಆರ್‌ಎಸ್‌ಎಸ್ ಕಚೇರಿಯ ಮೇಲೆ ಸ್ಥಳೀಯವಾಗಿ ತಯಾರಿಸಿದ ಬಾಂಬ್ ಅನ್ನು ಎಸೆದಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರದೇಶವು ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಸಿಪಿಎಂ ಕಾರ್ಯಕರ್ತರ ನಡುವೆ ಹಿಂಸಾತ್ಮಕ ಘರ್ಷಣೆಯ ಇತಿಹಾಸವನ್ನು ಹೊಂದಿದೆ. 2010-2016ರ ನಡುವೆ ಈ ಪ್ರದೇಶದಲ್ಲಿ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಹಲವಾರು ದಾಳಿಗಳು ನಡೆದಿವೆ.

ಈ ದಾಳಿಯ ಹಿಂದೆ ಸಿಪಿಎಂ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.