ಮುಂಬೈ : ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಲಾಗಿದೆ. ಈ ಮೂಲಕ ಪೆಟ್ರೋಲ್ ಪ್ರತಿ ಲೀಟರ್ ಗೆ 5 ರೂಪಾಯಿ ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 3 ರೂಪಾಯಿ ಇಳಿಕೆಯಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸ್ಥಾನ ಅಲಂಕಾರ ಮಾಡಿದ್ದ ಏಕನಾಥ್ ಶಿಂದೆ ರಾಜ್ಯದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್ ದರ ಕಡಿತಗೊಳಿಸುವುದಾಗಿ ಘೋಷಣೆ ಮಾಡಿದ್ದರು. ಇದರ ಬೆನ್ನಲ್ಲೇ ಪ್ರತಿ ಲೀಟರ್ ಪೆಟ್ರೋಲ್ ಗೆ 5 ರೂ. ಹಾಗೂ ಪ್ರತಿ ಲೀಟರ್ ಡೀಸೆಲ್ ಮೇಲಿನ 3 ರೂ. ವ್ಯಾಟ್ ಅನ್ನು ಕಡಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ 6,000 ಕೋಟಿ ರೂಪಾಯಿ ಹೊರೆ ಬೀಳಲಿದೆ ಎಂದು ಮುಖ್ಯಮಂತ್ರಿ ಶಿಂದೆ ತಿಳಿಸಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಶಿಂದೆ ತೆಗೆದುಕೊಂಡಿರುವ ನಿರ್ಧಾರಕ್ಕೆ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರಿಂದ ರಾಜ್ಯದ ಜನರಿಗೆ ನೆಮ್ಮದಿ ಎಂದು ಹೇಳಿದ್ದಾರೆ.










