ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ : ಡಿಕೆಶಿ.

65
firstsuddi

ಬೆಂಗಳೂರು : ಪಕ್ಷದ ಬಗ್ಗೆ ನಿಜವಾಗಲೂ ಆಸಕ್ತಿ ಇದ್ದರೆ ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡಿ. ಹೆಚ್ಚಿನ ಜನರನ್ನು ಪಕ್ಷಕ್ಕೆ ಕರೆ ತರುವತ್ತ ಗಮನಹರಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮದವರು, ಮುಖ್ಯಮಂತ್ರಿ ಸ್ಥಾನ ವಿಚಾರವಾಗಿ ಜಮೀರ್ ಅಹ್ಮದ್ ಅವರು ನೀಡಿರುವ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿ, ನನ್ನ ಲೆವೆಲ್ ಗೆ ಮಾತನಾಡುವವರ ವಿಚಾರ ನಾನು ಮಾತನಾಡುತ್ತೇನೆ. ಸದ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಬೇಕು. ಎಲ್ಲರಿಗೂ ನಾನು ಈ ಮಾತನ್ನು ಹೇಳುತ್ತಿದ್ದೇನೆ ಎಂದರು.

ಮುಸಲ್ಮಾನರ ಸಲೂನ್ ಬಂದ್ ಮಾಡಿಸಬೇಕು ಎಂಬ ಶ್ರೀರಾಮ ಸೇನೆಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, ನಾನು ಪ್ರಮೋದ್ ಮುತಾಲಿಕ್ ಅವರಿಗೆ ಉತ್ತರ ನೀಡುವುದಿಲ್ಲ. ರಾಜ್ಯದಲ್ಲಿ ಸಂವಿಧಾನ ಬದ್ಧವಾಗಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಪ್ರಮಾಣ ಮಾಡಿರುವ ಮುಖ್ಯಮಂತ್ರಿಗಳು, ಸಚಿವರು ಈ ಬಗ್ಗೆ ಉತ್ತರ ನೀಡಬೇಕು. ಈ ಎಲ್ಲವನ್ನು ಬಿಜೆಪಿ ಸರ್ಕಾರವೇ ಹೇಳಿಸುತ್ತಿದೆ. ಹಳೆ ಮೈಸೂರು ಸೇರಿದಂತೆ ಅನೇಕ ಭಾಗಗಳಲ್ಲಿ ಅವರು ಈ ರೀತಿ ಪ್ರಚೋದಿಸುತ್ತಿದ್ದಾರೆ. ಇದೆಲ್ಲದರ ಬಗ್ಗೆ ನಾನು ಈಗ ಮಾತನಾಡುವುದಿಲ್ಲ. ಆಮೇಲೆ ಮಾತಾಡುತ್ತೇನೆ. ಈ ವಿಚಾರವಾಗಿ ಮೊದಲು ಮುಖ್ಯಮಂತ್ರಿಗಳು ಉತ್ತರಿಸಲಿ ಎಂದು ಒತ್ತಾಯಿಸಿದರು.

ಕೋಲಾರದಲ್ಲಿ ಬೇರೆ, ಬೇರೆ ಬಣಗಳ ಪ್ರತಿಭಟನೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ಕೋಲಾರದಲ್ಲಿ ಯಾವುದೇ ಬಣ ಇಲ್ಲ. ಸೋನಿಯಾ ಗಾಂಧಿ ಅವರಿಗೆ ರಕ್ಷಣೆ ಸಿಗಬೇಕು ಎಂದು ಎಲ್ಲರೂ ಹೋರಾಟ ಮಾಡುತ್ತಿದ್ದೇವೆ. ನಾವು ಎಲ್ಲ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಲು ಸೂಚಿಸಿದ್ದು, ಅವರು ಮಾಡಿದ್ದಾರೆ ಎಂದರು.